ಬಿಜೆಪಿ ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಹರೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೇಘರಾಜ್, ಜಿ.ಗುಡ್ಡಪ್ಪ, ಜಯರಾಮ, ಕೆ.ವಿ.ಅಣ್ಣಪ್ಪ ಮುಂತಾದವರಿದ್ದರು.  
ಜಿಲ್ಲೆ

ನಾಡಿದ್ದು ಡಿಸಿ ಕಚೇರಿಗೆ ಎಸ್ಟಿ ಮೋರ್ಚಾದಿಂದ ಮುತ್ತಿಗೆ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ. ಅಕ್ರಮ ವರ್ಗಾವಣೆಯ ಸಮಗ್ರ ತನಿಖೆಗೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜೂ. 28ರಂದು ರಾಜ್ಯವ್ಯಾಪಿ ಹೋರಾಟಕ್ಕೆ ಕರೆ ನೀಡಿದ್ದು, ಬಿಜೆಪಿ ಎಸ್‌ಟಿ ಮೋರ್ಚಾದಿಂದ ಅಂದು ಬೆಳಗ್ಗೆ 11ಕ್ಕೆ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ.

ಜಿಲ್ಲೆಯ ಬಿಜೆಪಿ ಶಾಸಕರು, ಜಿಲ್ಲಾ ಸಮಿತಿ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸುವರು ಎಂದು ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಹರೀಶ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ನಂತರ ಹಣದ ಅಕ್ರಮ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ. ನಿಗಮದ ಹಣ ಮೊದಲು 18 ಅಕ್ರಮ ಖಾತೆಗಳಿಗೆ ವರ್ಗಾವಣೆಯಾಗಿದೆ. ನಂತರ ವಿವಿಧ ಉದ್ಯಮಿಗಳ ಖಾತೆಗೆ ಜಮೆಯಾಗಿದೆ. ಆ ಹಣ ತೆಲಂಗಾಣದ ಚುನಾವಣೆಗೂ ಬಳಕೆಯಾಗಿದೆ ಎಂದು ಆರೋಪಿಸಿದರು.
ಇಷ್ಟು ದೊಡ್ಡ ಮೊತ್ತದ ಹಣ ವರ್ಗಾವಣೆ ಸಿಎಂ ಗಮನಕ್ಕೆ ಬಾರದೇ ಇರಲು ಸಾಧ್ಯವಿಲ್ಲ. ಈಗಾಗಲೇ ಸಂಬಂಧಿಸಿದ ಸಚಿವರ ತಲೆದಂಡವಾಗಿದೆ. ಸಿಎಂ ಸಿದ್ದರಾಮಯ್ಯ ಕೂಡಾ ರಾಜೀನಾಮೆ ನೀಡಬೇಕು. ನೆಪಮಾತ್ರಕ್ಕೆ ಒಂದಷ್ಟು ಅಧಿಕಾರಿಗಳನ್ನು ಬಂಧಿಸಿ ತನಿಖೆ ಮಾಡಲಾಗುತ್ತಿದೆ. ಇದರ ಹಿಂದೆ ಹಲವಾರು ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ದೂರಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಎಸ್‌ಟಿ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಎಸ್.ಎಚ್.ಜಯರಾಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಂಜಯ ಕುಮಾರ್, ಜಿ.ಗುಡ್ಡಪ್ಪ, ಜಿಲ್ಲಾ ಮಾಧ್ಯಮ ಪ್ರಮುಖ್ ಕೆ.ವಿ.ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿದ್ದರು.