ಮೈಸೂರು: ಬಿಜೆಪಿ ಮೈಸೂರು ನಗರ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಎಲ್.ನಾಗೇಂದ್ರ ಹಾಗೂ ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಸೋಮವಾರ ಅಧಿಕಾರ ಸ್ವೀಕರಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರವಷ್ಟೇ ನೇಮಕಾತಿ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ನಗರ ಕಚೇರಿಯಲ್ಲಿ ಸೋಮವಾರ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷರೂ ಆದ ಶಾಸಕ ಟಿ.ಎಸ್.ಶ್ರೀವತ್ಸ ಅವರು ನಾಗೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಸಂಜೆ ನಡೆದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಅವರು ಮಹದೇವಸ್ವಾಮಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ವೇಳೆ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಎಲ್.ನಾಗೇಂದ್ರ, ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು, ಬೂತ್ ಅಧ್ಯಕ್ಷರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸಿಕೊಂಡು ಹೋಗಲಾಗುವುದು ಎಂದು ತಿಳಿಸಿದರು.
ಮೈಸೂರು ನಗರದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಕೆಲಸ ಮಾಡಲಾಗುವುದು. ಪಕ್ಷಕ್ಕಾಗಿ ಹಗಲಿರುಳು ದುಡಿಯುವ ಜತೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೂ ಶ್ರಮಿಸಲಾಗುವುದು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಬರಲಿದೆ. ಈ ಸಲ ಹೆಚ್ಚು ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಪಾಲಿಕೆಯಲ್ಲಿ ಸ್ವತಂತ್ರವಾಗಿ ಅಧಿಕಾರದ ಗದ್ದುಗೆಗೆ ಏರುವುದು ನಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಎಸ್.ಎ.ರಾಮದಾಸ್, ಮಾಜಿ ಸಚಿವ ಸಿ.ಎಚ್.ವಿಜಯ್‌ಶಂಕರ್, ಮಾಜಿ ಮೇಯರ್ ಶಿವಕುಮಾರ್, ಮುಖಂಡರಾದ ತೋಂಟದಾರ್ಯ, ಕೋಟೆ ಎಂ.ಶಿವಣ್ಣ, ಮೈ.ವಿ.ರವಿಶಂಕರ್, ಸಿದ್ದರಾಜು, ಅನಿಲ್ ಥಾಮಸ್, ಗಿರಿಧರ್, ವಾಣೀಶ್, ಫಣೀಶ್, ಎಂ.ಜೆ.ಕಿರಣ್‌ಗೌಡ, ವಸಂತ್ ಕುಮಾರ್ ಇನ್ನಿತರರಿದ್ದರು.
ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಹೊಸ ಜವಾಬ್ದಾರಿ ಎಲ್.ನಾಗೇಂದ್ರ ಹೆಗಲೇರಿದೆ. ನಗರ ಯುವ ಮೋರ್ಚಾ ಉಪಾಧ್ಯಕ್ಷರಾಗಿ, ಕೆ.ಆರ್.ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿ, ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಬಳಿಕ ಸ್ಲಂ ಮೋರ್ಚಾ ರಾಜ್ಯ ಕಾರ್ಯದರ್ಶಿ, ಸ್ಲಂ ಮೋರ್ಚಾ ರಾಜ್ಯಧ್ಯಕ್ಷರಾಗಿ ಹಾಗೂ ಮೈಸೂರು ವಿಭಾಗ ಪ್ರಭಾರಿಯಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದರು. 3 ಬಾರಿ ಪಾಲಿಕೆ ಸದಸ್ಯರಾಗಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. 2023ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.
ಎಲ್.ಆರ್.ಮಹದೇವಸ್ವಾಮಿ ಅಧಿಕಾರ ಸ್ವೀಕರಿಸಿ ಕಾರ್ಯಾರಂಭ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಮೈಸೂರು ತಾಲೂಕು ಪಂಚಾಯಿತಿ ಸದಸ್ಯರಾಗಿ, ತಾಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ವರುಣ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾದ ಅಧ್ಯಕ್ಷರಾಗಿ, ಗ್ರಾಮಾಂತರ ಘಟಕದ ಯುವ ಮೋರ್ಚಾದ ಅಧ್ಯಕ್ಷರಾಗಿಯೂ ಪಕ್ಷ ಕಟ್ಟುವ ಕೆಲಸ ಮಾಡಿದ್ದಾರೆ.