ಜಿಲ್ಲೆ

ಜೂ.4ರಂದು ರಾಜ್ಯಮಟ್ಟದ ನಾಲ್ವಡಿ ಜಯಂತಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಮಾಹಿತಿ

ಕೆ.ಎನ್.ರಾಘವೇಂದ್ರ

ಮಂಡ್ಯ: ಜಿಲ್ಲಾಡಳಿತ ವತಿಯಿಂದ ಜೂ.4ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ರಾಜ್ಯಮಟ್ಟದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯುತ್ಸವ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಂಡ್ಯ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ಜಯಂತಿಯನ್ನು ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸಬೇಕು. ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಂಬೇಡ್ಕರ್ ಭವನದವರೆಗೆ ವಿವಿಧ ಕಲಾತಂಡಗಳ ಮೆರವಣಿಗೆ ನಡೆಯಲಿದೆ. ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು, ಪೂರ್ಣಕುಂಭ, ಎನ್‌ಎಸ್‌ಎಸ್, ಎನ್‌ಸಿಸಿ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಭಾಗವಹಿಸಿ ಮೆರವಣಿಗೆಗೆ ವಿಶೇಷ ಮೆರಗು ನೀಡಲಾಗುವುದು ಎಂದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ತಳಿರು ತೋರಣದಿಂದ ಅಲಂಕಾರ ಮಾಡುವಂತೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ವೇದಿಕೆ ಅಲಂಕಾರ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಅಂದು ವೇದಿಕೆ ಕಾರ್ಯಕ್ರಮ ಹಾಗೂ ಮೆರವಣಿಗೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು. ಜೂ.3 ಹಾಗೂ 4ರಂದು ಎಲ್ಲ ಸರ್ಕಾರಿ ಕಚೇರಿಗಳಿಗೆ ದೀಪಾಲಂಕಾರ ಮಾಡಬೇಕು. ಅಂತೆಯೇ ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ದೀಪಾಲಂಕಾರ ಮಾಡುವಂತೆ ಮನವಿ ಮಾಡಲಾಗುವುದು. ನೀರಾವರಿ ಇಲಾಖೆಯಿಂದ ಐ.ಬಿ ವೃತ್ತದಿಂದ ಷುಗರ್ ಫ್ಯಾಕ್ಟರಿ ವೃತ್ತದವರೆಗೆ ದೀಪಾಲಂಕಾರ ಮಾಡಬೇಕು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಕಲ್ಚರಲ್ ಆ್ಯಂಡ್ ಎಜುಕೇಷನಲ್ ಟ್ರಸ್ಟ್‌ನವರು ನಾಲ್ವಡಿ ಅವರ ಕುರಿತು 30ಕ್ಕೂ ಹೆಚ್ಚು ಕಲಾವಿದರು ಜೂ.4ರಂದು ಸಂಜೆ 6 ಗಂಟೆಗೆ ಕಲಾಮಂದಿರದಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಇದಕ್ಕೆ ಅಗತ್ಯ ವ್ಯವಸ್ಥೆ ಮಾಡಬೇಕು. ಅಂತೆಯೇ ಜಿಲ್ಲಾಡಳಿತದ ವತಿಯಿಂದ ಅಂಬೇಡ್ಕರ್ ಭವನದಲ್ಲಿ 4ರಂದು ಬೆಳಗ್ಗೆ 9 ರಿಂದ 11 ಗಂಟೆವರೆಗೆ ಬೃಹತ್ ರಕ್ತ ದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ರಕ್ತನಿಧಿಯಲ್ಲಿ ರಕ್ತದ ಕೊರತೆ ಇದ್ದು, ನಾಲ್ವಡಿ ಅವರ ಸ್ಮರಣಾರ್ಥ 300 ಯೂನಿಟ್ ರಕ್ತ ಸಂಗ್ರಹ ಮಾಡುವ ಗುರಿ ಹೊಂದಲಾಗಿದೆ. ರಕ್ತದಾನ ಮಾಡುವುದರಿಂದ ಅಪಘಾತಕ್ಕೆ ಒಳಗಾದವರು ಹಾಗೂ ಕಾಯಿಲೆಯಿಂದ ಬಳಲುತ್ತಿರುವವರ ಜೀವ ಉಳಿಸಬಹುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸ್ಿ, ರೆಡ್‌ಕ್ರಾಸ್ ಸಂಸ್ಥೆ ಉಪಾಧ್ಯಕ್ಷೆ ಮೀರಾಶಿವಲಿಂಗಯ್ಯ, ಡಿಡಿಪಿಐ ಎಸ್.ಟಿ.ಜವರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಉದಯ್‌ಕುಮಾರ್, ಪೌರಾಯುಕ್ತ ಆರ್.ಮಂಜುನಾಥ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಕೃಷ್ಣ ಕುಮಾರ್, ವಿವಿಧ ಸಂಘಟನೆಯ ಮುಖ್ಯಸ್ಥರಾದ ತಗ್ಗಹಳ್ಳಿ ವೆಂಕಟೇಶ್, ಸುಜಾತಾಕೃಷ್ಣ, ಜಿ.ಟಿ.ವೀರಪ್ಪ, ಎಚ್.ಸಿ.ಮಂಜುನಾಥ್, ಎಲ್.ಸಂದೇಶ್, ಕೀಲಾರ ಕೃಷ್ಣೇಗೌಡ, ಬಿ.ಎಂ.ಅಪ್ಪಾಜಪ್ಪ, ನಾಗರತ್ನ, ಪ್ರತಾಪ್, ಭುಜವಳ್ಳಿ ರಾಮಚಂದ್ರ, ಸುರೇಶ್, ಧನಂಜಯ, ದರಸಗುಪ್ಪೆ, ಜಿ.ಮಹಂತಪ್ಪ ಇತರರಿದ್ದರು.