ಜಿಲ್ಲೆ

ನಗರದಲ್ಲಿ ನಮ್ಮ ಕ್ಲಿನಿಕ್ ಕೇಂದ್ರ ಲೋಕಾರ್ಪಣೆ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ

ಮಂಡ್ಯ: ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಜತೆಯಲ್ಲಿ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಹಾಲಹಳ್ಳಿಯಲ್ಲಿ ನೂತನವಾಗಿ ಆರಂಭಿಸಿರುವ ನಮ್ಮ ಕ್ಲಿನಿಕ್‌ಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಲೋಕಾರ್ಪಣೆಗೊಳಿಸಿದರು.

ಪ್ರತಿ 30 ಸಾವಿರ ಜನಸಂಖ್ಯೆಗೆ ಒಂದರಂತೆ ನಮ್ಮ ಕ್ಲಿನಿಕ್ ಕಾರ್ಯನಿರ್ವಹಿಸಲಿದೆ. ನಗರ ಪ್ರದೇಶದ ಸಮುದಾಯಕ್ಕೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ ಒದಗಿಸುವ ಉದ್ದೇಶ ಹೊಂದಿದೆ. ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ನಿರಂತರ ಆರೋಗ್ಯ ಪಾಲನೆಯನ್ನು ಖಾತ್ರಿಪಡಿಸುವ ಮತ್ತು ಆಸ್ಪತ್ರೆಗಳಿಗೆ ರೆಫರಲ್ ಸೇವೆಗಳ ಸಂಪರ್ಕ ಕಲ್ಪಿಸಲಿದೆ.

ಆರೋಗ್ಯ ಸೇವೆಗಳಿಗಾಗಿ ಸಾರ್ವಜನಿಕರು ತಮ್ಮ ಸ್ವಂತ ಹಣದ ಖರ್ಚನ್ನು ಕಡಿಮೆ ಮಾಡುವ ಮತ್ತು ದ್ವಿತೀಯ, ತೃತೀಯ ಹಂತದ ಆರೋಗ್ಯ ಸಂಸ್ಥೆಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡುವ ಉದ್ದೇಶವನ್ನು ಹೊಂದಲಾಗಿದೆ. ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರೀಕರಿಸುವ ಜತೆಗೆ ಸಾಂಕ್ರಾಮಿಕ ರೋಗಗಳ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸಲು ನೆರವಾಗಲಿದೆ. ಅಂತೆಯೇ ಸಾಂಕ್ರಾಮಿಕ ರೋಗ ಉಲ್ಬಣ ಪರಿಸ್ಥಿತಿಯನ್ನು ತ್ವರಿತಗತಿಯಲ್ಲಿ ದಾಖಲಿಸುವ ವ್ಯವಸ್ಥೆಯನ್ನು ಚಾಲನೆಗೊಳಿಸಲಾಗುವುದು. ಇದರಿಂದ ಆರೋಗ್ಯ ಸಂವರ್ಧನೆ ಹಾಗೂ ಕ್ಷೇಮ ಚಟುವಟಿಕೆಗಳ ಮೂಲಕ ಗಂಡಾಂತರ ಕಾರ್ಯ ಪರಿಸ್ಥಿತಿಗಳನ್ನು ನಿವಾರಿಸಬಹುದು.

ಶಾಸಕ ರವಿಕುಮಾರ್ ಗಣಿಗ, ಉದ್ಯಮಿ ಸ್ಟಾರ್ ಚಂದ್ರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ಕುಮಾರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಮತ್ತು ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಎಂ.ಎನ್.ಆಶಾಲತಾ, ಡಾ.ಬೆಟ್ಟಸ್ವಾಮಿ, ಕಾಂತರಾಜು, ಡಾ.ಜವರೇಗೌಡ ಇತರರಿದ್ದರು.