ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಸಂಘರ್ಷ ಇಲ್ಲದೆ ಸಾಮಾಜಿಕ ಕ್ರಾಂತಿ ಮಾಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಜಗತ್ತಿನ ಗಮನ ಸೆಳೆದಿದ್ದಾರೆ. ಅವರ ಹೆಸರಲ್ಲಿ ಪುಂಜಾಲಕಟ್ಟೆಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಬ್ರಹ್ಮಶ್ರೀ ನಾರಾಯಣಗುರು ವಸತಿ ಶಾಲೆ ಈಗ ಬಾಡಿಗೆ ಕಟ್ಟಡದಲ್ಲಿದ್ದು, ವಿದ್ಯಾರ್ಥಿಗಳನ್ನು ಇಲಾಖೆ ವಿಳಂಬ ಮಾಡದೆ ಸ್ಥಳಾಂತರಿಸಬೇಕು. ಅಲ್ಲೊಂದು ಧ್ಯಾನಮಂದಿರವನ್ನೂ ನಿರ್ಮಿಸಲಾಗುವುದು ಎಂದು ಶಾಸಕ ರಾಜೇಶ್ ನೈಾಕ್ ಹೇಳಿದರು.
ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುಂಜಾಲಕಟ್ಟೆ ಶ್ರೀ ನಾರಾಯಣಗುರು ವಸತಿ ಶಾಲೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಗಾಣದಪಡ್ಪು, ಯುವವಾಹಿನಿ ಬಂಟ್ವಾಳ ತಾಲೂಕು ಘಘ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಪ್ರಯುಕ್ತ ತಾಲೂಕುಮಟ್ಟದ ನಾರಾಯಣಗುರು ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದರು.
ಬಂಟ್ವಾಳ ಪುರಸಭಾ ಅಧ್ಯಕ್ಷ ಬಿ.ವಾಸು ಪೂಜಾರಿ, ಉಪತಹಸೀಲ್ದಾರ್ ನವೀನ್ ಬೆಂಜನಪದವು ಮಾತನಾಡಿದರು. ಶ್ರೀ ನಾರಾಯಣಗುರು ವಸತಿ ಶಾಲೆ ಮುಖ್ಯ ಶಿಕ್ಷಕ ಸಂತೋಷ್ ಕುಮಾರ್ ಗುರು ಸಂದೇಶ ನೀಡಿದರು. ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಯುವವಾಹಿನಿ ಬಂಟ್ವಾಳ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ರಾಗಿಣಿ ಮಾಧವ ಚಂಡ್ತಿಮಾರ್ ಉಪಸ್ಥಿತರಿದ್ದರು. ಯುವವಾಹಿನಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು.