ಜಿಲ್ಲೆ

ಹೆದ್ದಾರಿ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಮಂಗಳವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169, 169ಎ ಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರಾವಳಿ ಬೈಪಾಸ್ ನಿಂದ ಮಲ್ಪೆ ವರೆಗೆ ಹೆದ್ದಾರಿ ಅಗಲೀಕರಣಕ್ಕೆ ಅಗತ್ಯವಿರುವ ಜಾಗ ಭೂ ಸ್ವಾಧಿನ ಪಡಿಸಿಕೊಳ್ಳಲು ಇರುವ ತಾಂತ್ರಿಕ ತೊಂದರೆಗಳನ್ನು  ಸರಿಪಡಿಸಿಕೊಂಡು ಭೂ ಸ್ವಾಧಿನ ಕಾರ್ಯವನ್ನು ಶ್ರೀ ಕೈಗೊಂಡು ಕಾಮಗಾರಿ ಪ್ರಾರಂಭಿಸಬೇಕು ಎಂದರು.

ಉಡುಪಿ ನಗರದ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಗಳನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿಸದೇ ಇರುವುದರಿಂದ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುವುದರ ಜೊತೆಗೆ ಅಪಘಾತಗಳು ಸಹ ನಡೆಯುತ್ತವೆ. ಮುಂದಿನ ದಿನಗಳಲ್ಲಿ ಈ ರೀತಿ ಮುಂದುವರಿದರೆ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಂತೆಕಟ್ಟೆ ಅಂಡರ್ ಪಾಸ್ ರಸ್ತೆ ಕಾಮಗಾರಿಗಳಿಗೆ ಗುಣಮಟ್ಟದೊಂದಿಗೆ ಆಗುತ್ತಿಲ್ಲ.  ಮಂದಗತಿಯಲ್ಲಿ ಸಾಗುತ್ತಿವೆ ಎಂಬ ದೂರುಗಳು ಕೇಳಿ ಬರುತ್ತಿವೆ. ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಭಿಯಂತರರು ಈ ಬಗ್ಗೆ ಎಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸಬೇಕು. ಆದಷ್ಟ್ಟು ತ್ವರಿತ ಗತಿಯಲ್ಲಿ ಕೆಲಸಕಾರ್ಯಗಳನ್ನು ಮುಗಿಸಬೇಕು ಎಂದರು.

ಶಾಸಕ ಸುನೀಲ್ ಕುಮಾರ್ ಮಾತನಾಡಿ, ಸಾಣೂರಿನ ಗ್ರಾಮ ಪಂಚಾಯಿತಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರ್ವೀಸ್ ರಸ್ತೆಯ ಅತ್ಯವಶ್ಯಕತೆಯಿದೆ. ಇದನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗಲಿದೆ. ಸಾಣೂರು ಬಳಿಯ ಸೇತುವೆ ಕಾಮಗಾರಿಯ ವೇಗವನ್ನು ಹೆಚ್ಚಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಪೌರಾಯುಕ್ತ ರಾಯಪ್ಪ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮದ್ ಅಜ್ಮಿ, ಗುತ್ತಿಗೆದಾರರು  ಉಪಸ್ಥಿತರಿದ್ದರು.