ಜಿಲ್ಲೆ

ಜು.೮ ರಂದು ರಾಷ್ಟ್ರೀಯ ಲೋಕ್ ಅದಾಲತ್

ಮಡಿಕೇರಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜು.೮ ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ಪುಟ್ಟರಂಗಸ್ವಾಮಿ ತಿಳಿಸಿದರು.


ನಗರದ ನೂತನ ನ್ಯಾಯಾಲಯ ಸಭಾಂಗಣದಲ್ಲಿ ವಕೀಲರು ಹಾಗೂ ಅಧಿಕಾರಿಗಳ ಜತೆ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ನ್ಯಾಯಾಲಯಗಳಲ್ಲಿ ಹಲವು ಪ್ರಕರಣಗಳಿದ್ದು, ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ವಕೀಲರ ಸಹಕಾರದಿಂದ ಲೋಕ್ ಅದಾಲತ್ ಕಾರ್ಯಕ್ರಮ ಯಶಸ್ವಿಗೊಳಿಸಬೇಕಿದೆ ಎಂದು ವಿವರಿಸಿದರು.


ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬಂಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಹಾಗೂ ವೈವಾಹಿಕ ಕುಟುಂಬ ನ್ಯಾಯಾಲಯ ಪ್ರಕರಣಗಳನ್ನು(ವಿಚ್ಛೇದನೆಯನ್ನು ಹೊರತುಪಡಿಸಿ) ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.


ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಬಿ.ಪ್ರಸಾದ್‌ರವರು ಲೋಕ್ ಅದಾಲತ್ ಮಹತ್ವದ ಬಗ್ಗೆ ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಕೆ.ಡಿ.ದಯಾನಂದ, ಪೌರಾಯುಕ್ತ ವಿಜಯ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಇತರರು ಇದ್ದರು.