ಬ್ಯಾಡಗಿ: ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಮಾ. 8ರಂದು ಇಲ್ಲಿನ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಜರುಗಲಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರೇಕುಡೆ ತಿಳಿಸಿದರು.
ಈ ಕುರಿತು ಗುರುವಾರ ನ್ಯಾಯಾಲಯ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಣ್ಣಪುಟ್ಟ ಸಮಸ್ಯೆಗಳಿಗೆ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳಿಂದ ಸಾರ್ವಜನಿಕರ ಸಮಯ ಹಾಗೂ ಹಣ ವ್ಯರ್ಥವಾಗುವುದನ್ನು ತಪ್ಪಿಸುವ ಉದ್ದೇಶದಿಂದ ಲೋಕ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಕಕ್ಷಿದಾರರು ಪಾವತಿಸಿದ ಶುಲ್ಕ ಮರಳಿಸಲಾಗುವುದು ಎಂದರು.
ತಾಲೂಕಿನ ಸಾರ್ವಜನಿಕರು ಸಿವಿಲ್ ಮತ್ತು ಕ್ರಿಮಿನಲ್ ವಿಭಾಗ ಸೇರಿದಂತೆ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಚೆಕ್ ಬೌನ್ಸ್, ವಾಹನ ಅಪಘಾತ, ಸಿವಿಲ್ ವ್ಯಾಜ್ಯಗಳು, ಅಮಲ್ದಾರಿ, ಜೀವನಾಂಶ, ಕೌಟುಂಬಿಕ ಕಲಹ, ಗೃಹಕೃತ್ಯ, ದೌರ್ಜನ್ಯ, ಲಘು ಅಪರಾಧ, ವ್ಯಾಜ್ಯಪೂರ್ವ ಸಾಲ ವಸೂಲಾತಿ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಲೋಕ ಅದಾಲತ್‍ನಲ್ಲಿ ರಾಜಿ ಮಾಡಿಕೊಂಡ ಪ್ರಕರಣಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಮಾಹಿತಿಗಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ ಭೇಟಿಯಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದರು.
ಸಕಾಲದಲ್ಲಿ ನ್ಯಾಯ ಒದಗಿಸುವ ಉದ್ದೇಶದಿಂದ ಸುಪ್ರೀಂಕೋರ್ಟ್ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ವಾರ್ಷಿಕವಾಗಿ 4 ಬಾರಿ ಲೋಕ ಅದಾಲತ್ ಕಾರ್ಯಕ್ರಮ ಜರುಗಲಿವೆ ಎಂದರು.
ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಂಕರ ಬಾರ್ಕಿ, ಕಾರ್ಯದರ್ಶಿ ಮಂಜುನಾಥ ಹಂಜಗಿ, ಸಹಕಾರ್ಯದರ್ಶಿ ಎನ್. ಬಿ. ಬಳಿಗಾರ, ಸಹಾಯಕ ಸರ್ಕಾರಿ ಅಭಿಯೋಜಕ ರಾಜಣ್ಣ ನ್ಯಾಮತಿ, ಕೆ.ಆರ್. ಲಮಾಣಿ, ವಕೀಲರಾದ ಶ್ರೀನಿವಾಸ ಕೊಣ್ಣೂರ, ಚಂದ್ರಪ್ಪ ಕಾರಗಿ ಇದ್ದರು.