ಮಂಡ್ಯ: ಜಿಲ್ಲೆಯಲ್ಲಿ ನಗರ ಪ್ರದೇಶದ ಮತದಾರರು ಮತದಾನ ಮಾಡಲು ಆಸಕ್ತಿ ತೋರಿಸುತ್ತಿಲ್ಲ. ಇನ್ನಾದರೂ ಪ್ರತಿ ಮತದಾರರು ಚುನಾವಣೆಯ ಪ್ರಾಮುಖ್ಯತೆಯನ್ನು ಅರಿತು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಜ.25 ಭಾರತ ಚುನಾವಣಾ ಆಯೋಗ ಸಂಸ್ಥಾಪನೆಯಾದ ದಿನ. ಆದ್ದರಿಂದ ಪ್ರತಿವರ್ಷ ರಾಷ್ಟ್ರೀಯ ಮತದಾನ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುವುದು. ಪ್ರಜಾಸತ್ತಾತ್ಮಕ ರಾಷ್ಟ್ರಗಳಲ್ಲಿ ಭಾರತಕ್ಕೆ ತನ್ನದೇ ಆದ ಮಹತ್ವವಿದೆ. ದೇಶದ ಮತದಾನ ಪ್ರಕ್ರಿಯೆಯಲ್ಲಿ 1979ರಿಂದ ಇವಿಎಂ ಮೂಲಕ ಮತದಾನ ಮಾಡಲಾಗುತ್ತಿದ್ದು, ಅತ್ಯಂತ ನಿಷ್ಪಕ್ಷವಾಗಿ ಪಾರದರ್ಶಕವಾಗಿ ಸಮರ್ಥ ಹಾಗೂ ಯಶಸ್ವಿಯಾಗಿ ಚುನಾವಣೆಯನ್ನು ನಡೆಸುತ್ತಿದ್ದೇವೆ. ಈ ಮೂಲಕ ಬೇರೆ ದೇಶಕ್ಕೆ ಭಾರತ ಮಾದರಿಯಾಗಿದೆ ಎಂದು ಹೇಳಿದರು.
ದೇಶದ ಎಲ್ಲ ಪ್ರಜೆಗಳು ಮೂಲ ಹಕ್ಕುಗಳನ್ನು ಪಡೆಯುವ ಮುನ್ನ ಕರ್ತವ್ಯವನ್ನು ಉತ್ತಮವಾಗಿ ನಿಭಾಯಿಸಬೇಕು. ಆಗ ಮಾತ್ರ ಹಕ್ಕುಗಳನ್ನು ಪಡೆಯುವ ಅಧಿಕಾರವಿರುತ್ತದೆ. ಹಿಂದೆ ಮತದಾನ ಮಾಡಲು ಮತದಾರರಿಗೆ 21 ವರ್ಷ ವಯಸ್ಸಾಗಿರಬೇಕಿತ್ತು. ದೇಶದಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಾದಂತೆ 1979ರಲ್ಲಿ 21 ರಿಂದ 18 ವರ್ಷಕ್ಕೆ ಇಳಿಕೆ ಮಾಡಲಾಯಿತು. ಆದ್ದರಿಂದ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಲು ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವಂತಹ ದೊಡ್ಡ ದೇಶ ಭಾರತವಾಗಿದೆ. ಇದು ಹೆಮ್ಮೆಯ ವಿಷಯವಾಗಿದ್ದು, ಈ ಮೂಲಕ ಎಲ್ಲ ಮತದಾರರು ಪ್ರಜಾಸತ್ತಾತ್ಮಕ ಮೌಲ್ಯವನ್ನು ಅಳವಡಿಸಿಕೊಂಡು ಬದುಕಬೇಕು. ಕಳೆದ ಬಾರಿ ಚುನಾವಣೆಯಲ್ಲಿ ನಮ್ಮ ಜಿಲ್ಲೆಯಲ್ಲಿ ಶೇ.82ರಷ್ಟು ಮತದಾನ ನಡೆದಿದ್ದು, ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುವುದು ಹೆಮ್ಮೆಯ ವಿಷಯ. ಇದು ಜಿಲ್ಲೆಯಲ್ಲಿ ಪ್ರಜ್ಞಾವಂತ ನಾಗರಿಕರಿದ್ದಾರೆ ಎಂಬ ಸೂಚನೆಯಾಗಿದೆ. ಅದೇ ರೀತಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಜಿಲ್ಲೆಯ ಎಲ್ಲ ಮತದಾರರು ಸಹ ಸಕ್ರಿಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಜಿ.ರಮಾ ಮಾತನಾಡಿ, ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವಂತಹ ಕೆಲಸ ಮತದಾನ ಪ್ರಕ್ರಿಯೆಯಾಗಿದೆ. ಯುವಕರು ಹಾಗೂ ಪ್ರಜೆಗಳು ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಂಡು ಮತದಾನದ ಮಹತ್ವವನ್ನು ಅರಿತು ಮತದಾನ ಮಾಡಬೇಕು. ಅದೇ ರೀತಿ ಮತದಾನದ ಮಾಡುವುದು ಪ್ರತಿಯೊಬ್ಬರ ಹಕ್ಕು ಹಾಗೂ ಕರ್ತವ್ಯವಾಗಬೇಕು ಎಂದು ಕಿವಿಮಾತು ಹೇಳಿದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಘೋಷಣೆಯ ಮೂಲಕ ಮತದಾರರಲ್ಲಿ ಪ್ರಜ್ಞೆ ಮೂಡಿಸಬೇಕು. ಪ್ರಜೆಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಸುಭದ್ರ ಪ್ರಜಾಪ್ರಭುತ್ವ ಸಾಧ್ಯ ಎಂಬಂತೆ ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ಎಲ್ಲ ಮತದಾರರು ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಹಿರಿಯ ಸಿವಿಲ್ ನ್ಯಾಯಾಧೀಶೆ ವಾಣಿ ಎ.ಶೆಟ್ಟಿ, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಚುನಾವಣಾ ತಹಸೀಲ್ದಾರ್ ವೆಂಕಟಾಚಲಪತಿ ಇತರರಿದ್ದರು.
ಇದೇ ವೇಳೆ ಕಳೆದ ವರ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮತಗಟ್ಟೆ ಅಧಿಕಾರಿ ಹಾಗೂ ಅತ್ಯುತ್ತಮ ಸಂಯೋಜಕರನ್ನು ಅಭಿನಂದಿಸಲಾಯಿತು. ಜಿಲ್ಲೆಯಲ್ಲಿ ಮತದಾನಕ್ಕೆ ಸಂಬಂಧಿಸಿದಂತೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ( ಕನ್ನಡ, ಆಂಗ್ಲ ಭಾಷೆ), ಭಿತ್ತಿ ಚಿತ್ರ, ರಸಪ್ರಶ್ನೆಯ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅಂತೆಯೇ ಮೊದಲ ಬಾರಿಗೆ ಮತ ಚಲಾಯಿಸುವಂತಹ ಹಾಗೂ ಅಂಗವಿಕಲ ಯುವ ಮತದಾರರಿಗೆ ಚುನಾವಣಾ ಗುರುತಿನ ಚೀಟಿ ನೀಡಲಾಯಿತು.