ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ಮಾಡಿದರು. ಪಿ.ಸಂದರ್ಶ, ಪುಟ್ಟರಾಜು, ಅಲೋಕ, ಕೆ.ಆರ್.ಮಹೇಶ್ ಇದ್ದರು. 
ಜಿಲ್ಲೆ

ಗ್ರಾಮಗಳ ಅಭಿವೃದ್ಧಿಗೆ ಅಗತ್ಯ ಕ್ರಮ

ಲೋಕೇಶ್ ಮನು. ಡಿ

ಮದ್ದೂರು: ತಾಲೂಕಿನ ಗ್ರಾಮಾಂತರ ಪ್ರದೇಶಗಳ ರಸ್ತೆಗಳ ನಿರ್ಮಾಣ ಹಾಗೂ ಮೂಲ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲೂಕಿನ ಚಾಮನಹಳ್ಳಿ, ರಾಂಪುರ, ಸೊಳ್ಳೆಪುರ, ವಳಗೆರೆಹಳ್ಳಿ, ವಳಗೆರೆಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಳಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ಕೆಲವು ಗ್ರಾಮಗಳಲ್ಲಿ ರಸ್ತೆಗಳು ಸರಿಯಿಲ್ಲದ ಪರಿಣಾಮ ಮಳೆ ಬಂದಾಗ ಸಂಚಾರ ಮಾಡಲು ತುಂಬಾ ಕಷ್ಟವಾಗಿತ್ತು. ಇದರಿಂದ ಪಾದಚಾರಿಗಳಿಗೆ ಹಾಗೂ ವಾಹನ ಸವಾರಿಗೆ ತುಂಬಾ ತೊಂದರೆಯಾಗಿತ್ತು. ಆದ್ದರಿಂದ ಇಂತಹ ರಸ್ತೆಗಳನ್ನು ಪಟ್ಟಿ ಮಾಡಿಕೊಂಡು ಅಭಿವೃದ್ಧಿ ಮಾಡುವ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಲಾಗುತ್ತಿದೆ ಎಂದರು.

ನಾನು ಶಾಸಕನಾದ 2 ವರ್ಷದಲ್ಲಿ 1400 ರೂ. ಕೋಟಿಗೂ ಅಧಿಕ ಅನುದಾನ ತಂದು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಗ್ರಾಮಾಂತರ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಲು, ನೀರಾವರಿ ಯೋಜನೆ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ವಿಶೇಷ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಲಾಗಿದೆ ಎಂದರು.

ಗ್ರಾಮಾಂತರ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಕಾಲುವೆ, ರಸ್ತೆಗಳು, ಸೇತುವೆಗಳನ್ನು ಅಭಿವೃದ್ಧಿಪಡಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದಿಂದ ಅನುದಾನ ತಂದು ರಸ್ತೆ ಹಾಗೂ ಸೇತುವೆಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಮತ್ತಷ್ಟು ವಿಶೇಷ ಅನುದಾನ ತಂದು ತಾಲೂಕಿನ ಸರ್ವತೋಮುಖ ಅಭಿವೃದ್ಧಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಗ್ರಾಪಂ ಅಧ್ಯಕ್ಷ ಸಿ.ಕೆ.ಸತೀಶ್, ಸದಸ್ಯರಾದ ಅನಂತು, ಜಗ್ಗ, ಹರೀಶ್, ತಾಪಂ ಮಾಜಿ ಸದಸ್ಯ ಕೆ.ಆರ್.ಮಹೇಶ್, ಮುಖಂಡರಾದ ಸಿ.ಡಿ.ಕುಚೇಲ, ವಸಂತರಾಜು, ಕೃಷ್ಣ, ಶಂಕರ್, ಅಶೋಕ್, ಪುಟ್ಟರಾಜು, ಶ್ರೀನಿವಾಸ್, ದಯಾನಂದ, ಅಲೋಕ ಇದ್ದರು.