ಜಿಲ್ಲೆ

“ಝೀರೋ ಕ್ಯಾಶುಯಲ್ಟಿ” ಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು

ಸುನಿಲ್ ಪೊನ್ನೇಟಿ

ಮಡಿಕೇರಿ:

ಮಳೆಗಾಲದಲ್ಲಿ ಕೊಡಗಿನ ನಿವಾಸಿಗಳು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಅವಘಢಗಳು ಆಗದೆ ಇರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ “ಝೀರೋ ಕ್ಯಾಶುಯಲ್ಟಿ” ಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಶನಿವಾರ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಮಾತನಾಡಿರು.
ಕಳೆದ ಕೆಲವು ವರ್ಷಗಳಲ್ಲಿ ಮಳೆಗಾಲದಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. ಈ ಬಾರಿಯ ಮಳೆಗಾಲದಲ್ಲಿ ಆಗಬಹುದಾದ ಅವಘಡಗಳನ್ನು ಸಮರ್ಪಕವಾಗಿ ಹಾಗೂ ಕ್ಷಿಪ್ರವಾಗಿ ನಿಭಾಯಿಸುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಎನ್‌ಡಿಆರ್‌ಎಫ್ ತಂಡ ಈಗಾಗಲೇ ಜಿಲ್ಲೆಗೆ ಆಗಮಿಸಿದೆ. 33 ಜನರ ಈ ತಂಡ ಈಗಾಗಲೇ ಜಿಲ್ಲೆಯ ಹಲವು ಭಾಗಗಳಲ್ಲಿ ಮಾಕ್ ಡ್ರಿಲ್ ಕೈಗೊಳ್ಳುತ್ತಿದೆ. ಜಿಲ್ಲಾಧಿಕಾರಿಗಳು ಅವಘಢಗಳು ಸಂಭವಿಸಬಹುದಾದ ಪ್ರದೇಶಗಳ ಮಾಹಿತಿಯನ್ನು ಕ್ರೋಢೀಕರಿಸಿ ತಂಡವನ್ನು ಸಜ್ಜಾಗಿಡಬೇಕು ಎಂದು ಸಚಿವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 4 ರಷ್ಟು ಕಡಿಮೆ ಮಳೆ ವರದಿಯಾಗಿದೆ. ಜನವರಿಯಿಂದ ಜೂನ್ ತಿಂಗಳವರೆಗೆ ಸಾಧಾರಣ ಮಳೆ ಆಗಿದೆ. ಜುಲೈ ತಿಂಗಳಲ್ಲಿ ಉತ್ತಮ ಮಳೆ ವರದಿಯಾಗಿದ್ದು, ಹೆಚ್ಚಿನ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದಕ್ಕೆ ಅಧಿಕಾರಿಗಳು ಸಜ್ಜಾಗಬೇಕು. ತಾಲೂಕುವಾರು ಟಾಸ್ಕ್ ಫೋರ್ಸ್ಗಳನ್ನು ರಚಿಸಿ ಅಗತ್ಯ ಸಾಮಗ್ರಿಗಳನ್ನು ಹಾಗೂ ಅಂಕಿ ಅಂಶಗಳನ್ನು ಕ್ರೋಢೀಕರಿಸುವ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದರು.
ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಹರಾಷ್ಟ್ರದಲ್ಲಿ ನೀರಿಗೆ ಸಿಲುಕಿ ಕುಟುಂಬ ಸಾವಿಗೀಡಾದ ಘಟನೆಯಂತೆ ನಮ್ಮ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಸಂಭವಿಸಬಾರದು. ಈ ಹಿನ್ನೆಲೆಯಲ್ಲಿ ಪ್ರವಾಸಿಗರು ನೀರಿಗೆ ಇಳಿಯುವುದನ್ನ ನಿರ್ಬಂಧಿಸಬೇಕು. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಪ್ರದೇಶಗಳಲ್ಲಿ ರಕ್ಷಣೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚಿಸಿದರು.
ಸೂಕ್ತ, ಸಮರ್ಪಕ ಹಾಗೂ ಕ್ಷಿಪ್ರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ, ಈ ಬಾರಿಯ ಮಳೆಗಾಲದಲ್ಲಿ ಯಾವುದೇ ಅವಘಡ ಸಂಭವಿಸದAತೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಾದ್ಯಂತ ಜಿಲ್ಲೆಯ ನಿವಾಸಿಗಳು ಹಾಗೂ ಪ್ರವಾಸಿಗರು ಅವಘಡಗಳಿಗೆ ತುತ್ತಾಗದೆ ಇರುವಂತಹ ರೀತಿಯಲ್ಲಿ ಪರಿಸ್ಥಿತಿಯನ್ನು ನಿರ್ವಹಿಸುವ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್‌ ಪೋನ್ನಣ್ಣ, ಶಾಸಕರಾದ ಮಂತರ್‌ ಗೌಡ, ಮೈಸೂರು – ಕೊಡಗು ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಜಿಲ್ಲಾಧಿಕಾರಿಗಳಾದ ವೆಂಕಟ್‌ ರಾಜಾ, ಜಿಲ್ಲಾ ಪಂಚಾಯತ್‌ ಸಿಇಓ ವರ್ಣೀತ್‌ ನೇಗಿ ಸೇರಿದಂತೆ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.