ಜಿಲ್ಲೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಾರದು

ಶಿವರಾಜ.ಎಂ

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಮಾರ್ಗಸೂಚಿ ಅನ್ವಯ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೂಚಿಸಿದ್ದಾರೆ.

ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಎನ್‌ಇಇಟಿ 2025 ಪರೀಕ್ಷೆ ಸಂಬಂಧ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ವೈದ್ಯಕೀಯ ಪ್ರವೇಶಾತಿ ಕಲ್ಪಿಸಲು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಎನ್‌ಇಇಟಿ ರಾಜ್ಯಾದ್ಯಂತ ಮೇ 4 ರಂದು ನಡೆಯುತ್ತಿದ್ದು ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು. ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗಂಗಾಧರಪುರ ಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು, ಮಾದಗೊಂಡನಹಳ್ಳಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಾಲ್ಲೂಕು ಆಫೀಸ್‌ರಸ್ತೆಯ ಸರ್ಕಾರಿ ಪದವಿ ಕಾಲೇಜು(ಪ್ರೌಢಶಾಲಾ ವಿಭಾಗ) ಈ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಎನ್‌ಇಇಟಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಆ ದಿನ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್‌ಕಾರ್ಡ್, ಪ್ಯಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜತೆ ಒಂದು ಪೋಸ್ಟ್‌ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳ ಸಹಿತ ಹಾಜರಾಗಬೇಕು ಎಂದು ತಿಳಿಸಿದರು.

ಬಯೋಮೆಟ್ರಿಕ್ ಕಡ್ಡಾಯ: ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ನಂಬರ್ ಇರುವ ಕೊಠಡಿಗೆ ತೆರಳಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟಿಕ್ ಹಾಜರಾತಿ ಕಡ್ಡಾಯವಾಗಿದ್ದು, ಪ್ರವೇಶ ಪತ್ರದಲ್ಲಿ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಎನ್‌ಇಇಟಿ ಪರೀಕ್ಷೆಯು ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಸಿದ್ದತೆ ಕೈಗೊಳ್ಳಲಾಗಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಲು ನಾಲ್ಕು ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಭದ್ರತೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರಗಳನ್ನು ಪರಿಶೀಲಿಸಿ: ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್‌ವ್ಯವಸ್ಥೆ, ಸಿಸಿ ಕ್ಯಾಮೆರಾ ಅಳವಡಿಕೆ, ಆಂಬುಲೆನ್ಸ್ ಸೇವೆ , ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ಅಂಗವಿಕಲರು, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವೀಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಅಗ್ನಿಶಾಮಕ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮ ವಹಿಸಿ ಎಂದು ಅಧಿಕಾರಿಗಳು ಸೂಚಿಸಿದರು.