ಮಂಡ್ಯ: ಜಿಲ್ಲೆಯಲ್ಲಿ ಕೃಷಿಕರ ಸಮಸ್ಯೆಗಳನ್ನು ಆದ್ಯತೆ ನೀಡಿ ಪರಿಹರಿಸಲಾಗುವುದು. ಅಂತೆಯೇ ಮಳೆಯ ಕೊರತೆ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಕೂಡಲೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಪಾರದರ್ಶಕವಾಗಿ ಆಡಳಿತ ನಡೆಸಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲಾಗುವುದು. ಈ ಮೂಲಕ ಕಡತ ವಿಲೇವಾರಿಗೆ ಕ್ರಮ ಕೈಗೊಳ್ಳುತ್ತೇನೆ. ಅಧಿಕಾರ ಎಂಬುದು ಸಾರ್ವಜನಿಕರ ಸೇವೆ ಮಾಡಲು ಸಿಕ್ಕಿರುವ ಅವಕಾಶ. ರೈತರಿಗೆ ಭೂಮಿ ತಂತ್ರಾಂಶ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಕಾಲಮಿತಿಯೊಳಗೆ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.
ಈ ಹಿಂದೆ ಉಡುಪಿ, ಮಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ, ವಿಜಯಪುರ, ತುಮಕೂರು ಜಿಲ್ಲೆಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ಕಂದಾಯ ಇಲಾಖೆಯಲ್ಲಿ ಯಾವುದೇ ತೊಂದರೆ ಇದ್ದರೂ ಪರಿಶೀಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ಪಾರದರ್ಶಕ ಹಾಗೂ ಪ್ರತಿಸ್ಪಂಧನಾತ್ಮಕ ಆಡಳಿತವನ್ನು ನೀಡುವುದು ಮುಖ್ಯ ಗುರಿ ಎಂದು ಹೇಳಿದರು.