ಜಿಲ್ಲೆ

ನೂತನ ಶಿಕ್ಷಣ ನೀತಿ ರಾಷ್ಟ್ರದ ಅಭಿವೃದ್ಧಿಗೆ ಪೂರಕ ; ಶಾಸಕ ಜಿ.ಬಿ.ಜ್ಯೋತಿಗಣೇಶ್

Tumakuru

ತುಮಕೂರು: ನೂತನ ಶಿಕ್ಷಣ ನೀತಿ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿದ್ದು, ಸ್ವಾಗತಿಸುವ ಮೂಲಕ ದೇಶದಲ್ಲಿ ಏಕರೂಪ ಶಿಕ್ಷಣ ನೀತಿ ಬೆಂಬಲಿಸುವಂತೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ನಿವೃತ್ತ ಪ್ರಾಂಶುಪಾಲರು, ಉಪನ್ಯಾಸಕರಿಗೆ ಸನ್ಮಾನ ಮತ್ತು ನೂತನ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದಲೇ ಕೌಶಲ ಪೂರಿತ ಶಿಕ್ಷಣ ನೀಡುವ ಮೂಲಕ ಕೌಶಲಯುಕ್ತ ಭಾರತ ನಿರ್ಮಿಸುವ ನಿಟ್ಟಿನಲ್ಲಿ ಏಕರೂಪ ಶಿಕ್ಷಣ ನೀತಿ ಪೂರಕವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಶ್ರಮಿಸಬೇಕು ಎಂದು ಕರೆ ನೀಡಿದರು. ಏಕರೂಪ ಶಿಕ್ಷಣ ಜಾರಿಗೊಳಿಸುವ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪ್ರಾಚಾರ್ಯರ ಪಾತ್ರ ಮಹತ್ವದಾಗಿದ್ದು, ಕೌಶಲ ಪೂರಕ ಶಿಕ್ಷಣದಿಂದ, ಅನರಕ್ಷಸ್ಥರ ಸಂಖ್ಯೆ ಕಡಿಮೆಯಾಗುವುದಲ್ಲದೆ, ಮಗುವಿನ ಆಸಕ್ತಿಗೆ ಪೂರಕವಾದ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಿದ್ದು, ನೂತನ ಶಿಕ್ಷಣ ನೀತಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ, ಕರೊನಾ ಸಂದರ್ಭದಲ್ಲಿ ಅನುದಾನರಹಿತ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪ್ಯಾಕೇಜ್ ನೀಡುವ ನಿಟ್ಟಿನಲ್ಲಿ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಶಾಸಕರೊಂದಿಗೆ ಒತ್ತಾಯಿಸುವುದಾಗಿ ತಿಳಿಸಿದರು.

ಸರ್ಕಾರಿ ಶಾಲೆಯಲ್ಲಿ ಓದಿದ ನನಗೆ ಸಂಸ್ಥೆ ಕಟ್ಟಬೇಕೆಂಬ ಹಂಬಲವಿಲ್ಲ, ಸರ್ಕಾರಿ ಸಂಸ್ಥೆಗಳನ್ನು ಬಲಪಡಿಸುವ ಗುರಿ ಹೊಂದಿದ್ದು, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗುವುದರೊಂದಿಗೆ ಶಿಕ್ಷಕರು ಹಾಗೂ ಪದವೀಧರರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.ಡಿಡಿಪಿಯು ನರಸಿಂಹಮೂರ್ತಿ, ಸಂಘದ ಕಾರ್ಯದರ್ಶಿ ಸಿದ್ದಲಿಂಗಯ್ಯ ಮಾತನಾಡಿದರು. ಸಂಘದ ಅಧ್ಯಕ್ಷ ಲಿಂಗದೇವರು, ಖಜಾಂಚಿ ರಾಜಯ್ಯ, ರಾಜ್ಯ ಪ್ರತಿನಿಧಿ ಜೈರಾಮಯ್ಯ, ನಾಗರಾಜು, ಜಯರಾಮ್, ರವಿಕುಮಾರ್ ಇದ್ದರು.

ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಮೂಲಕ ಶಿಕ್ಷಣ ಕ್ರಾಂತಿ ಮಾಡಬೇಕಿದೆ, ಯಾರೂ ಸಹ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕಿರುವುದು ನಮ್ಮ ಜವಾಬ್ದಾರಿ. ಖಾಸಗಿಯವರ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು. ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ತರುವ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ ಬೆಂಬಲಿಸಬೇಕಿದೆ. ಚಿದಾನಂದ ಎಂ.ಗೌಡ ಪರಿಷತ್ ಸದಸ್ಯ