ಶಿವಮೊಗ್ಗ: ಜನರೊಂದಿಗೆ ಜನತಾದಳ ಘೋಷವಾಕ್ಯದೊಂದಿಗೆ ರಾಜ್ಯ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜು.23ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ತಿಳಿಸಿದರು.
ಈಗಾಗಲೇ 12 ಜಿಲ್ಲೆಗಳಲ್ಲಿ ಪ್ರವಾಸ ಮಾಡಿರುವ ನಿಖಿಲ್ 23ರಂದು ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಲ್ಲಾಪುರ ಗ್ರಾಮದ ಗುಡ್ಡದ ಮಲ್ಲೇಶ್ವರ ಸಮುದಾಯ ಭವನದಲ್ಲಿ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದೆ. ಶಾಸಕಿ ಶಾರದಾ ಪೂರ‌್ಯಾನಾಯ್ಕ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಾಹ್ನ 3ಕ್ಕೆ ಶಿವಮೊಗ್ಗದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಕಾರ್ಯಕರ್ತರ ಸಮಾವೇಶ ಪಕ್ಷದ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ನೇತೃತ್ವದಲ್ಲಿ ಆಯೋಜನೆಗೊಂಡಿದೆ. ಸಂಜೆ 5.30ಕ್ಕೆ ಭದ್ರಾವತಿಯ ಮಂಜುನಾಥ ಕಲ್ಯಾಣ ಮಂದಿರದಲ್ಲಿ ಕಾರ್ಯಕರ್ತರ ಸಮಾವೇಶ ರಾಜ್ಯ ಉಪಾಧ್ಯಕ್ಷೆ ಶಾರದಾ ಅಪ್ಪಾಜಿ ನೇತೃತ್ವದಲ್ಲಿ ನಡೆಯಲಿದೆ ಎಂದು ಹೇಳಿದರು.
ಜೆಡಿಎಸ್ ಶಾಸಕ ಸಿ.ಎಸ್.ಸುರೇಶ್ ಬಾಬು, ವಿಧಾನಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ಮುಂತಾದವರು ಭಾಗವಹಿಸಲಿದ್ದಾರೆ. ಪಕ್ಷದ ಸಂಘಟನೆ, ಸದಸ್ಯತ್ವ ನೋಂದಣಿ ಬಗ್ಗೆ ನಿಖಿಲ್ ಸಮಾಲೋಚನೆ ನಡೆಸಲಿದ್ದಾರೆ ಎಂದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ಮಾತನಾಡಿ, ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆ, ನಾಗರಿಕರ ಸಮಸ್ಯೆ, ಯಾವ ತಾಲೂಕಿನಲ್ಲಿ ಅಭಿವೃದ್ಧಿಯಾಗಬೇಕು ಎಂಬ ಬಗ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ನಿಖಿಲ್ ಕುಮಾರಸ್ವಾಮಿ ಚರ್ಚೆ ನಡೆಸಲಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್ ಮಾತನಾಡಿ, ಭದ್ರಾವತಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಶಿವಮೊಗ್ಗ ನಗರ ಜೆಡಿಎಸ್ ಘಟಕದ ಅಧ್ಯಕ್ಷ ದೀಪಕ್ ಸಿಂಗ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಪ್ರಮುಖರಾದ ಕೆ.ಎನ್.ರಾಮಕೃಷ್ಣ, ತ್ಯಾಗರಾಜ್, ನಾಗೇಶ್, ಎಚ್.ಎಂ.ಸಂಗಯ್ಯ, ಅಬ್ದುಲ್ ವಾಜಿದ್, ಸಂಜಯ್ ಕಶ್ಯಪ್, ರಾಕೇಶ್ ಡಿಸೋಜ, ನರಸಿಂಹ ಗಂಧದಮನೆ, ಜಯಣ್ಣ, ಲೋಹಿತ್, ಯೋಗೇಶ್ ಸುದ್ದಿಗೋಷ್ಠಿಯಲ್ಲಿದ್ದರು.