ವಿಜಯಪುರ: ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸಬಾರದೆಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘ (ರಿ)ದಿಂದ ಮಂಗಳವಾರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾಗಿ ಹಲವು ವರ್ಷಗಳೇ ಕಳೆದಿವೆ. ಇದೀಗ ಮಳೆಗಾಲದ ಅಧಿವೇಶನದಲ್ಲಿ ಪ್ರಸ್ತಾಪವಾಗಿದ್ದು, ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವ (ಪಿಪಿಪಿ ಮಾದರಿ) ದಲ್ಲಿ ಸ್ಥಾಪಿಸುವ ಕುರಿತು ಚರ್ಚೆಯಾಗಿದೆ. ಯಾವುದೇ ಕಾರಣಕ್ಕೂ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬಾರದು. ಅಲ್ಲದೇ, ಶೀಘ್ರದಲ್ಲೇ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕೆಂದು ಒತ್ತಾಯಿಸಿದರು.
ವೈದ್ಯಕೀಯ ಮಹಾವಿದ್ಯಾಲಯ ಸಂಪೂರ್ಣ ಸರ್ಕಾರದ ಅಧೀನದಲ್ಲಿದ್ದರೆ ಬಡ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಇದರಲ್ಲಿ ಖಾಸಗಿ ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದೊಂದಿಗೆ ಜೋಡಿಸಿದರೆ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ತೊಂದರೆಯಾಗುತ್ತದೆ. ಖಾಸಗಿ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತ ಮಂಡಳಿಯವರು ತಮ್ಮ ಮನಸ್ಸಿಗೆ ಬಂದಂತೆ ಶುಲ್ಕ ಪಡೆಯುತ್ತಾರೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ಕೊಟ್ಟು ಶಿಕ್ಷಣ ಕಲಿಯಲು ಆಗುವುದಿಲ್ಲ. ಇದರಿಂದ ವೈದ್ಯಕೀಯ ಶಿಕ್ಷಣ ಕಲಿಯಬೇಕೆಂಬ ಆಶಾಭಾವದಲ್ಲಿರುವ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯವನ್ನು ಖಾಸಗಿ ಅವರೊಂದಿಗೆ ಜೋಡಿಸಿಕೊಳ್ಳುವುದು ಸರ್ಕಾರದ ಹಿಂದಿನ ಉದ್ದೇಶವಾದರೂ ಏನು? ಎಂದರಲ್ಲದೇ ಇದರಲ್ಲಿ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯದವರ ಷಡ್ಯಂತ್ರ ಅಡಗಿದೆ ಎಂದರು.
ಬಡ ವಿದ್ಯಾರ್ಥಿಗಳ ಅನುಕೂಲ ದೃಷ್ಟಿಯಿಂದ ಸಂಪೂರ್ಣ ಸರ್ಕಾರದ ಅಧೀನದಲ್ಲಿಯೇ ವೈದ್ಯಕೀಯ ಕಾಲೇಜ್ ನಡೆಸಿಕೊಂಡು ಹೋಗಬೇಕು. ಒಂದು ವೇಳೆ ಖಾಸಗಿ ಸಹಭಾಗಿತ್ವದಲ್ಲಿ ನಡೆಸಿದ್ದೆ ಆದರೆ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.
ಮುಖಂಡ ಲಂಕೇಶ ತಳವಾರ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಳಾಧ್ಯಕ್ಷ ವಿಜಯ ಪೂಜೇರಿ ಮತ್ತಿತರರಿದ್ದರು.