ತುಮಕೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದಿಂದ ಶುಕ್ರವಾರ ಧರಣಿ ನಡೆಸಲಾಯಿತು.
197 ಹಿಂದುಳಿದ ವರ್ಗಗಳು ಹಾಗೂ ದಲಿತ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ತಿಳಿಸುವ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸರ್ಕಾರ ಒಪ್ಪಿಕೊಂಡು, ಸಾರ್ವಜನಿಕ ಚರ್ಚೆಗೆ ಬಿಡಬೇಕು ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಒತ್ತಾಯಿಸಿದರು.
ಸುಪ್ರೀಂಕೋರ್ಟ್ ಮಾರ್ಗದರ್ಶನದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ 180 ಕೋಟಿ ರೂ. ವ್ಯಯ ಮಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಗಣತಿ ಮಾಡಿದ್ದಾರೆ. ಇದನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು ಕೂಡಲೇ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದರು.
ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ನ್ಯಾ.ಕಾಂತರಾಜು ಸಮಿತಿ ವರದಿ ಸಲ್ಲಿಸಿ ಮೂರು ವರ್ಷ ಕಳೆದರೂ, ವರದಿಯನ್ನು ಜಾರಿಗೆ ತರದೆ ಮೂಲೆಗುಂಪು ಮಾಡಲಾಗಿದೆ. ಇದರ ವಿರುದ್ದ ಈಗಾಗಲೇ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಹೋರಾಟ ಆರಂಭವಾಗಿದೆ ಎಂದರು.
ಕಾಂಗ್ರೆಸ್ ಒಬಿಸಿ ಘಟಕದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ ಮಾತನಾಡಿ, ಇಡೀ ರಾಜ್ಯದ ಎಲ್ಲ ಸಮುದಾಯಗಳನ್ನು ಒಳಗೊಂಡಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ನಡೆದ ಸಾಮಾಜಿಕ, ಶೈಕ್ಷಣಿಕ ಜಾತಿ ಗಣತಿಯ ವರದಿಯನ್ನು ಜಾರಿಗೆ ತರದೆ ರಾಜ್ಯದ 6.50 ಕೋಟಿ ಜನರಿಗೆ ಅಪವಾನ ಮಾಡಿದೆ. ಇದನ್ನು ನಾವು ಸಹಿಸಲು ಸಾಧ್ಯವಿಲ್ಲ ಎಂದರು.
ಬಿಎಂಟಿಸಿ ಮಾಜಿ ಅಧ್ಯಕ್ಷ ನಾಗರಾಜ್ ಯಾದವ್, ಕಾಂಗ್ರೆಸ್ ಮುಖಂಡ ವಿ.ಆರ್.ಸುದರ್ಶನ್, ದೊಡ್ಡಬಳ್ಳಾಪುರ ಮಠದ ಶ್ರೀದಿವ್ಯ ಜ್ಞಾನಾನಂದಸ್ವಾಮೀಜಿ, ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ, ಮಾಜಿ ಶಾಸಕ ಡಾ.ರಫೀಕ್ ಅಹ್ಮದ್, ದಲಿತ ಮುಖಂಡ ಪಿ.ಎನ್.ರಾಮಯ್ಯ, ನರಸೀಯಪ್ಪ, ಮುಖಂಡರಾದ ಆರ್.ವೇಣುಗೋಪಾಲ್, ಅಡಿಟರ್ ಅಂಜನಪ್ಪ, ಸುರೇಶ್ ಲಾತೂರ್ ಇದ್ದರು.