ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಕಳೆದ ಸಾಲಿನಲ್ಲಿ ನಿರೀಕ್ಷಿತ ಮಳೆಯಾಗದ ಹಿನ್ನೆಲೆಯಲ್ಲಿ ಕೆರೆಕಟ್ಟೆಗಳಲ್ಲಿ ನೀರು ಬತ್ತಿಹೋಗುತ್ತಿವೆ. ಅಂತರ್ಜಲಮಟ್ಟ ಕುಸಿತವಾಗಿರುವುದರಿಂದ ಕುಡಿವ ನೀರಿನ ಸಮಸ್ಯೆ ಎದುರಾಗಲಿದೆ, ಈ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಡಿವ ನೀರಿನ ಸಮಸ್ಯೆ ಎದುರಿಸುವ ಸಂಬಂಧ ಹಮ್ಮಿಕೊಂಡಿದ್ದ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಇತರ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಬೇಸಿಗೆಯಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಆಭಾವ ಸೃಷ್ಟಿ ಆಗದಂತೆ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಸಂಬಂಧ ಆಯಾ ತಾಲೂಕು ತಹಸೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಇತರ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು, ಎಲ್ಲಿಯಾದರೂ ನೀರಿನ ಸಮಸ್ಯೆ ಎದುರಾಗಿರುವುದು ಗಮನಕ್ಕೆ ಬಂದ ಕೂಡಲೇ ಪರ್ಯಾಯ ವ್ಯವಸ್ಥೆ ಮೂಲಕ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಈ ಸಂಬಂಧ ಸಿದ್ಧತೆ ಮಾಡಿಕೊಂಡಿರಬೇಕು ಎಂದು ಸೂಚಿಸಿದರು.
ಕೊಳವೆಬಾವಿ ಕಾಯ್ದಿರಿಸಿ ಮುಂಗಡವಾಗಿ ಖಾಸಗಿ ಕೊಳವೆ ಬಾವಿಗಳನ್ನು ಕಾಯ್ದಿರಿಸಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ವಹಿಸಬೇಕು. ಈ ಸಂಬಂಧ ನಗರ, ಪಟ್ಟಣ ಪ್ರದೇಶಗಳಲ್ಲಿ ಕೊಳವೆಬಾವಿ ಮಾಲೀಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಹಾಗೇಯೆ ಗ್ರಾಮೀಣ ಪ್ರದೇಶಗಳಲ್ಲಿ ರೈತರ ಜಮೀನುಗಳಲ್ಲಿನ ಕೊಳವೆಬಾವಿಗಳ ನೀರನ್ನು ಬಳಸಿಕೊಳ್ಳುವ ಸಂಬಂಧ ಆಯಾ ರೈತರೊಂದಿಗೆ ಮಾತುಕತೆ ನಡೆಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಡಿಸಿ ಸೂಚಿಸಿದರು.
ಮೇವಿನ ಅಭಾವ ಎದುರಾಗಬಾರದು ಜಿಲ್ಲೆಯಲ್ಲಿ ನೀರಿನ ಕೊರತೆ ನೇರವಾಗಿ ಜಾನುವಾರುಗಳ ಮೇವಿನ ಮೇಲೆ ಪರಿಣಾಮ ಬೀರಲಿದೆ. ಈ ಬಗ್ಗೆ ಪಶುಪಾಲನ ಇಲಾಖೆ ಮುಂಜಾಗ್ರತೆ ವಹಿಸಬೇಕು, ಜಾನುವಾರುಗಳಿಗೆ ಮೇವಿನ ಅಭಾವ ಸೃಷ್ಟಿ ಆಗದಂತೆ ಮುಂಗಡ ಮೇವು ಸಂಗ್ರಹಿಸಿ ಅಗತ್ಯವಿರುವ ಕಡೆಗೆ ವಿತರಣೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಮರೋಪಾಧಿಯಲ್ಲಿ ಸನ್ನದ್ಧರಾಗಿ ಕಳೆದ ವರ್ಷ ಕೈಕೊಟ್ಟ ಮಳೆಯಿಂದಾಗಿ ಜಿಲ್ಲೆಯ ಬಹುತೇಕ ಕೆರೆಕಟ್ಟೆಗಳು ಒಣಗಿ ಹೋಗಿದ್ದು, ಬೇಸಿಗೆ ಆರಂಭದಲ್ಲೇ ನೀರಿನ ಕೊರತೆ ಎದುರಾಗುವ ಸೂಚನೆ ದೊರಕಿದೆ. ಗ್ರಾಮಾಂತರ ಜಿಲ್ಲೆಯಲ್ಲಿ ಕೊಳವೆ ಬಾವಿಗಳೇ ನೀರಿನ ಪ್ರಮುಖ ಮೂಲವಾಗಿವೆ. ಕೆರೆಕಟ್ಟೆಗಳು ತುಂಬಿದರಷ್ಟೇ ಅಂತರ್ಜಲ ಮಟ್ಟ ಸುಧಾರಿಸಿ ನೀರಿನ ಸಮಸ್ಯೆಗೆ ಪರಿಹಾರ ಒದಗಿಸುತ್ತವೆ. ಆದರೆ ಮಳೆ ಕೈಕೊಟ್ಟಿರುವುದರಿಂದ ಕೊಳವೆಬಾವಿ ಅವಲಂಬಿತ ಜಿಲ್ಲೆಯಲ್ಲಿ ಕುಡಿವ ನೀರಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಮರೋಪಾಧಿಯಲ್ಲಿ ಸನ್ನದ್ಧರಾಗಬೇಕು ಎಂದು ಸೂಚನೆ ನೀಡಿದರು.