ಯಳಂದೂರು: ತಾಲೂಕಿನ ಕಿನಕಹಳ್ಳಿ ಗ್ರಾಮಕ್ಕೆ ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನೀರು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕುಡಿಯಲು ಯೋಗ್ಯವಲ್ಲದ ನೀರು ಪೂರೈಕೆ ಮಾಡುತ್ತಿರುವ ಬಗ್ಗೆ ‘ಕಿನಕಹಳ್ಳಿಯಲ್ಲಿ ಅಶುದ್ಧ ನೀರು ಪೂರೈಕೆ’ ಎಂಬ ಶೀರ್ಷಿಕೆಯಡಿಯಲ್ಲಿ ಜು.8 ರಂದು ‘ವಿಜಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತ ತಾಲೂಕು ಆಡಳಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಎಇಇ ಶ್ರೀನಿವಾಸ್ ನೇತೃತ್ವದಲ್ಲಿ ಪಿಡಿಒ ಉಷಾ ಹಾಗೂ ಇತರ ಅಧಿಕಾರಿಗಳು ಸೋಮವಾರ ಗ್ರಾಮಕ್ಕೆ ಭೇಟಿ ನೀಡಿದ್ದರು.
ಪಿಡಿಒ ಉಷಾ ಮಾತನಾಡಿ, ಇಲ್ಲಿಂದ ಯಾವುದೇ ಕಾರಣಕ್ಕೂ ಗ್ರಾಮದ ನಲ್ಲಿಗಳಿಗೆ ನೀರು ಬಿಡಬಾರದು. ಇವರಿಗೆ ಬೇರೆ ಕೊಳವೆ ಬಾವಿಯಿಂದ ನೀರು ಪೂರೈಸಲು ಸೂಕ್ತ ಕ್ರಮ ವಹಿಸಬೇಕು. 15ನೇ ಹಣಕಾಸು ಯೋಜನೆಯಡಿಯಲ್ಲಿ ಕ್ರಿಯಾಯೋಜನೆಯನ್ನು ರೂಪಿಸಿ ಸಂಬಂಧಪಟ್ಟ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಜತೆ ಚರ್ಚಿಸಿ ಹೊಸದಾಗಿ ಕೊಳವೆ ಬಾವಿಯನ್ನು ಕೊರೆಯಿಸಲು ಕ್ರಮ ವಹಿಸಲಾಗುವುದು. ಅಲ್ಲದೆ ಇಲ್ಲಿನ ತೊಂಬೆಗಳನ್ನು ಶುಚಿಯಾಗಿಟ್ಟುಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.