ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ಅತಿವೃಷ್ಟಿಯಿಂದ ಪ್ರಾಕೃತಿಕ ಅವಘಡಗಳು ಸಂಭವಿಸಿದಲ್ಲಿ ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಕೆರೆಕಟ್ಟೆ, ತೊರೆ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಆ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಯ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಈಗಾಗಲೇ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ವಾರಕ್ಕೊಮ್ಮೆಯಾದರೂ ತಮ್ಮ ಹೋಬಳಿ ವ್ಯಾಪ್ತಿಗೆ ಭೇಟಿ ನೀಡಿ ಪ್ರಾಕೃತಿಕ ವಿಕೋಪ ಸಂಬಂಧ ಮಾಹಿತಿ ಪಡೆಯುವುದರ ಜತೆಗೆ, ಹೆಚ್ಚಿನ ಮಳೆಯಾದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ತಹಸೀಲ್ದಾರರು ತಮ್ಮ ತಾಲೂಕು ವ್ಯಾಪ್ತಿಯಲ್ಲಿ ಮಳೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿ ಹವಾಮಾನ ಮುನ್ಸೂಚನೆ ಬಗ್ಗೆ ಕಾಲ ಕಾಲಕ್ಕೆ ಮಾಹಿತಿ ಹಂಚಿಕೊಳ್ಳಬೇಕು. ತಮ್ಮ ಹಾಗೂ ತಾಪಂ.ಇಒ ಹಂತದಲ್ಲಿ ತಾಲೂಕು ಮಟ್ಟದಲ್ಲಿ ಸಭೆ ನಡೆಸಬೇಕು. ಹಾಗೆಯೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸಹ ಸಭೆಗಳನ್ನು ಮಾಡಿ ಪ್ರಾಕೃತಿಕ ವಿಕೋಪ ಎದುರಿಸಲು ಸನ್ನದ್ಧರಾಗಬೇಕು ಎಂದರು.
ಹೆಚ್ಚಿನ ಮಳೆಯಾದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆಗೆ ಸಂಬಂಧಿಸಿದಂತೆ ಡಿಡಿಪಿಐ ಅವರಿಗೆ ಮಾಹಿತಿ ನೀಡಬೇಕು. ಡಿಡಿಪಿಐ ಅವರು ರಜೆ ಘೋಷಣೆ ಸಂಬಂಧ ಜಿಲ್ಲಾ ಮಟ್ಟದಲ್ಲಿ ಅಗತ್ಯ ಕ್ರಮವಹಿಸಬೇಕು ಎಂದರು.
ಪ್ರಾಕೃತಿಕ ವಿಕೋಪ ಎದುರಿಸುವ ಸಂಬಂಧ ಎನ್‌ಡಿಆರ್‌ಎಫ್, ಪೊಲೀಸ್, ಅಗ್ನಿಶಾಮಕ ಇತರರ ಜೊತೆಗೂಡಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಪ್ರಾತ್ಯಕ್ಷಿಕೆ ಏರ್ಪಡಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು. ಅತಿವೃಷ್ಟಿ ಉಂಟಾದ ಸಂದರ್ಭದಲ್ಲಿ ಎಚ್ಚರವಹಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಅತೀವೃಷ್ಟಿ ಉಂಟಾಗದಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.
ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರೀತಿಯ ಮುನ್ನೆಚ್ಚರ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಸಂದರ್ಭದಲ್ಲಿ ಯಾವ ರೀತಿ ಕ್ರಮಕೈಗೊಳ್ಳಬೇಕು ಎಂದು ಮಾಹಿತಿ ಇರಬೇಕು. ಅಂತಹ ಸಮಯದಲ್ಲಿ ಹೆಚ್ಚಿನ ಅರಿವು ಪ್ರತಿಯೊಬ್ಬರಲ್ಲಿಯೂ ಇರಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಯಾವುದೇ ರೀತಿಯ ಜೀವ ಹಾನಿಯಾಗದಂತೆ ಎಚ್ಚರವಹಿಸಬೇಕು. ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಸದಾ ಎಚ್ಚರವಹಿಸಬೇಕು. ಈ ಬಗ್ಗೆ ಜಲಾಶಯಗಳು, ನದಿಗಳಿಗೆ ಯಾರೂ ಸಹ ತೆರಳದಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಅಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸಿದಂತೆ ಎಚ್ಚರ ವಹಿಸಬೇಕು. ಮಾಹಿತಿ ಫಲಕ ಅಳವಡಿಸಬೇಕು ಎಂದು ಹೇಳಿದರು.
ಕಳೆದ ೨೦೧೮ ರಿಂದ ಮೂರು ವರ್ಷದ ಅವಧಿಯಲ್ಲಿ ಆಗಸ್ಟ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕು. ಸಾರ್ವಜನಿಕರಿಗೆ ಅಧಿಕಾರಿಗಳು ಸ್ಪಂದಿಸಬೇಕು. ಜತೆಗೆ ತಹಸೀಲ್ದಾರರು ಕಾಲ ಕಾಲಕ್ಕೆ ಮಾಹಿತಿ ನೀಡುವುದು ಸಹ ಅತೀ ಮುಖ್ಯವಾಗಿದೆ ಎಂದರು.
ರಸ್ತೆ ಬದಿಗೆ ಮರ ಹಾಗೂ ವಿದ್ಯುತ್ ಕಂಬ ಬಿದ್ದಲ್ಲಿ ಸಕಾಲದಲ್ಲಿ ತೆರವುಗೊಳಿಸುತ್ತಿದ್ದಾರೆ. ಹಾಗೆಯೇ ಬರೆ ಕುಸಿತ ಉಂಟಾದಲ್ಲಿ ಮಣ್ಣು ತೆರವುಗೊಳಿಸುವ ಕಾರ್ಯವನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾದಲ್ಲಿ ಸಾರಿಗೆ ಸಂಪರ್ಕ ಮತ್ತಿತರ ವ್ಯತ್ಯಯಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸುವ ಕಾರ್ಯವಾಗಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು. ಅಲ್ಲದೇ, ಜಿಲ್ಲೆಯಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆ ಜುಲೈ ಅಂತ್ಯದೊಳಗೆ ಕಂದಾಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಕೆಡಿಪಿ ಸಭೆಗೆ ಸಿದ್ಧತೆ ಕೈಗೊಂಡಿರುವ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.