ಜಿಲ್ಲೆ

5ರಂದು ಅರಮನೆಗೆ ಗಜಪಡೆ ಪ್ರವೇಶ


ನಗರದ ಅರಣ್ಯ ಭವನದ ಆವರಣದಲ್ಲಿ ಠಿಕಾಣಿ ಹೂಡಿರುವ ಅಭಿಮನ್ಯು ನೇತೃತ್ವದ ಗಜಪಡೆ ಸೆ.5 ರಂದು ಅರಮನೆ ಪ್ರವೇಶಿಸಲಿದೆ.

ಪ್ರತಿವರ್ಷದಂತೆ ಈ ಬಾರಿಯೂ ಗಜಪಡೆಗೆ ಅರಮನೆಯಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಗುತ್ತದೆ. ಅಂದು ಮಧ್ಯಾಹ್ನ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುತ್ತದೆ. ಜಿಲ್ಲೆಯ ಜನಪ್ರತಿನಿಧಿಗಳು, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಇದಕ್ಕೂ ಮುನ್ನ ಬೆಳಗ್ಗೆ 10 ಗಂಟೆಗೆ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆಯಿಂದ ದಸರಾ ಆನೆಗಳಿಗೆ ಪೂಜೆ ಸಲ್ಲಿಸಿ, ಬೀಳ್ಕೊಡಲಾಗುತ್ತದೆ. ಬಳಿಕ ಮೆರವಣಿಗೆಯಲ್ಲಿ ಅರಣ್ಯ ಭವನ, ಅಶೋಕ ವೃತ್ತ, ಆರ್‌ಟಿಒ ವೃತ್ತ, ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಬಸವೇಶ್ವರ ವೃತ್ತ ಹಾದು ಜಯಮಾರ್ತಾಂಡ ದ್ವಾರದ ಮೂಲಕ ಅರಮನೆ ಪ್ರವೇಶಿಸಲಿವೆ.

ಮಧ್ಯಾಹ್ನ 12.01 ರಿಂದ 12.51ರಲ್ಲಿ ಸಲ್ಲುವ ಅಭಿಜಿತ್ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗಜಪಡೆಗೆ ಸ್ವಾಗತ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ಸ್ವಾಗತ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡುವರು. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಶಾಸಕ ಟಿ.ಎಸ್. ಶ್ರೀವತ್ಸ, ಮೇಯರ್ ಶಿವಕುಮಾರ್, ಸಂಸದರಾದ ವಿ.ಶ್ರೀನಿವಾಸಪ್ರಸಾದ್, ಪ್ರತಾಪ್‌ಸಿಂಹ, ಸುಮಲತಾ ಅಂಬರೀಶ್ ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.