ಮೈಸೂರು: ಹೊಸ ವರ್ಷದ ಮೊದಲ ದಿನವಾದ ಸೋಮವಾರ ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಭಕ್ತರು ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡಿಬೆಟ್ಟದಲ್ಲಿ ಜನಸಂದಣಿ ಹೆಚ್ಚಾಗಿತ್ತು. ಆಷಾಢ ಶುಕ್ರವಾರ, ದಸರಾ ಮಹೋತ್ಸವದಂತಹ ವಿಶೇಷ ಸಂದರ್ಭಗಳಲ್ಲಿ ಬೆಟ್ಟದಲ್ಲಿ ಜನಸ್ತೋಮ ಸೇರುವುದು ಸಾಮಾನ್ಯ. ಅಂತೆಯೆ, ಹೊಸ ವರ್ಷದ ಮೊದಲ ದಿನ ಸಹಸ್ರಾರು ಜನರು ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ದೇವಾಲಯದ ರಾಜಗೋಪುರ, ಮಹಿಷಾಸುರ ಪ್ರತಿಮೆ ಮುಂದೆ ನಿಂತು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
ದೇವಾಲಯದಲ್ಲಿ ಸೋಮವಾರ ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಆರಂಭವಾದವು. 6ಗಂಟೆ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು. ಜಿಲ್ಲೆ, ರಾಜ್ಯ, ಹೊರ ರಾಜ್ಯಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಸರದಿಯಲ್ಲಿ ಆಗಮಿಸಿ ಚಾಮುಂಡೇಶ್ವರಿ ದರ್ಶನ ಪಡೆದರು. ಹೊಸ ವರ್ಷದ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯದ ಒಳಾಂಗಣವನ್ನು ವಿಶೇಷವಾಗಿ ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು.
ಹೊಸ ವರ್ಷದ ಹಿನ್ನೆಲೆಯಲ್ಲಿ ಸಾವಿರಾರು ಪ್ರವಾಸಿಗರು, ಭಕ್ತರು ಬೆಟ್ಟಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ವಾಹನ ಸಂಚಾರ ದಟ್ಟವಾಗಿತ್ತು. ಮಹಿಷಾಸುರ ಪ್ರತಿಮೆ ಹಾಗೂ ದೇವಿಕೆರೆ ಬಳಿ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದ್ದರೂ, ನೂರಾರು ವಾಹನಗಳು ಆಗಮಿಸಿದ ಹಿನ್ನೆಲೆಯಲ್ಲಿ ಸಂಪೂರ್ಣ ಭರ್ತಿಯಾಗಿತ್ತು. ಬೆಳಗ್ಗೆ 8.30ರವೇಳೆಗೆ ಬೆಟ್ಟದ ರಸ್ತೆಯೂದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಾಕಷ್ಟು ಮುಂಜಾಗ್ರತಾ ಕ್ರಮಗಳ ನಡುವೆಯೂ ವಾಹನ ಸವಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು. ಜತೆಗೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.