ಬಳ್ಳಾರಿ : ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಸರ್ಕಾರದ ನಿರ್ದೇಶನದಂತೆ ಜಿಲ್ಲಾಮಟ್ಟ ದ ಜನತಾ ದರ್ಶನ ಆಯೋಜಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವುದು ಇದರ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.
ತಾಲೂಕಿನ ಗ್ರಾಮೀಣ ಭಾಗವಾದ ಮೋಕಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೈತರು ಸೇರಿದಂತೆ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳನ್ನು ಮುಕ್ತವಾಗಿ ಹೇಳಿಕೊಳ್ಳಬಹುದು ಹಾಗೂ ಅಧಿಕಾರಿಗಳಿಂದ ಸೂಕ್ತ ಪರಿಹಾರ ಪಡೆದುಕೊಳ್ಳಬಹುದು ಎಂದು ಹೇಳಿದರು.
ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ನಿರ್ದೇಶನದಂತೆ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಗ್ರಾಮೀಣ ಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ. ವಿವಿಧ ಎಲ್ಲ ಇಲಾಖೆಗಳ ಕೌಂಟರ್‌ಗಳನ್ನು ತೆರೆಯಲಾಗಿದ್ದು, ಜನರು ತಮ್ಮ ಅಹವಾಲು ಅರ್ಜಿಯನ್ನು ಸಲ್ಲಿಸಿ, ಸ್ಥಳದಲ್ಲೇ ಅರ್ಜಿಗಳ ವಿಲೇವಾರಿ ಮಾಡಲಾಗುವುದು. ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗದಿದ್ದರೆ ಜನರ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ವರ್ಗಾವಣೆ ಮಾಡಿ ಕಾನೂನಾತ್ಮಕವಾಗಿ ಪರಿಹರಿಸಿಕೊಡಲಾಗುವುದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಎರಡು ಜನತಾ ದರ್ಶನ ಕಾರ್ಯಕ್ರಮ ಆಗಿದೆ. ಈ ಕಾರ್ಯಕ್ರಮ ಮೂಲಕ ಸರ್ಕಾರವು ಮನೆ ಬಾಗಿಲಿಗೆ ಹೋಗಿ ಜನರು ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಒದಗಿಸುತ್ತಿದೆ. ಇಲ್ಲಿಯವರೆಗೆ ಒಟ್ಟು 438 ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ 311 ಅರ್ಜಿಗಳಿಗೆ ಪರಿಹಾರ ಒದಗಿಸಲಾಗಿದೆ ಹಾಗೂ ಇನ್ನು 127 ಅರ್ಜಿಗಳು ಬಾಕಿ ಇವೆ ಎಂದು ತಿಳಿಸಿದರು.
ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಅಹವಾಲು ಸಲ್ಲಿಸಲು ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಲು 15 ಕೌಂಟರ್‌ಗಳನ್ನು ತೆರೆಯಲಾಗಿತ್ತು. ಸಾರ್ವಜನಿಕರು ತಮ್ಮ ಸಮಸ್ಯೆಗಳಿರುವ ಅಹವಾಲುಗಳನ್ನು ಒಬ್ಬೊರಾಗಿಯೇ ಸಲ್ಲಿಸಿದರು.
ವ್ಯಕ್ತಿಗತ ಮತ್ತು ಗ್ರಾಮ ಸೇವೆಗಾಗಿ ನೀಡಿದ ಇನಾಂ ಭೂಮಿಗಳನ್ನು ರೈತರಿಗೆ ಪಟ್ಟಾ ಭೂಮಿಗಳನ್ನಾಗಿ ಪರಿವರ್ತಿಸಿದ ದೃಢೀಕರಣ ಪತ್ರವನ್ನು ಬ್ಯಾಲಚಿಂತಿ ಗ್ರಾಮದ ಕೆ.ರಂಗಮ್ಮ, ಅಗಸರ ಮಲ್ಲಿಕಾರ್ಜುನ, ಕೆ.ಹನುಮಂತಪ್ಪ ಮತ್ತು ದಾಸರ ನಾಗೇನಹಳ್ಳಿ ಗ್ರಾಮದ ದೊಡ್ಡ ರುದ್ರಪ್ಪ, ಎಸ್.ಕೆಂಚಮ್ಮ, ಸಿ.ಯಾರ‌್ರಪ್ಪ, ಪಂಪನಗೌಡ ಸೇರಿದಂತೆ ಹತ್ತು ಫಲಾನುಭವಿಗಳಿಗೆ ವೇದಿಕೆ ಮೇಲೆ ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್‌ಮಿಶ್ರಾ ಅವರು ವಿತರಿಸಿದರು.
ಮೋಕಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಕೀರಮ್ಮ ಹಾಗೂ ಗಣ್ಯರು ಸೇರಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಗ್ಯಾರಂಟಿ ಯೋಜನೆಗಳ ಕುರಿತು ಚಿಗುರು ಕಲಾ ತಂಡದಿಂದ ಗಾಯನ ಪ್ರಸ್ತುತ ಪಡಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್, ಅಬಕಾರಿ ಅಧೀಕ್ಷಕ ಮಂಜುನಾಥ, ತಹಸೀಲ್ದಾರ್ ಗುರುರಾಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.