ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಸಮ್ಮೇಳನಕ್ಕೆ ಪ್ರತಿನಿಧಿಯಾಗಿ ನೋಂದಣಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಈ ಬಾರಿ ಆನ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿದ್ದು, 20 ದಿನ ಮಾತ್ರ ಇದಕ್ಕೆ ಅವಕಾಶವಿರಲಿದೆ.
ಸಕ್ಕರೆನಾಡಿನ ನುಡಿಜಾತ್ರೆಗೆ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಸಿದ್ಧತೆಗಳು ಭರ್ಜರಿಯಾಗಿಯೇ ನಡೆಯುತ್ತಿದೆ. ಅದೇ ರೀತಿ ಆತಿಥ್ಯಕ್ಕೆ ಹೆಸರುವಾಸಿಯಾಗಿರುವ ಮಂಡ್ಯದಲ್ಲಿ ಮೂರು ದಶಕದ ಬಳಿಕ ನಡೆಯುತ್ತಿರುವ ಅಕ್ಷರಜಾತ್ರೆಗೆ ಸಾಧ್ಯವಾದಷ್ಟು ಹೆಚ್ಚಿನ ಜನರನ್ನು ಸೆಳೆಯುವ ನಿಟ್ಟಿನಲ್ಲಿ ವಿಭಿನ್ನ ಕಾರ್ಯಕ್ರಮ ಈಗಾಗಲೇ ನಡೆಯುತ್ತಿವೆ. ಇದಕ್ಕೆ ಪೂರಕವಾಗಿ ಆನ್‌ಲೈನ್‌ನಲ್ಲಿಯೂ ನೋಂದಣಿ ಮಾಡಿಕೊಳ್ಳಲು ಸೌಲಭ್ಯ ಒದಗಿಸಿಕೊಡಲಾಗಿದೆ.
ಶ್ರೀರಂಗಪಟ್ಟಣ ತಾಲೂಕು ಕೆಆರ್‌ಎಸ್‌ನ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆನ್‌ಲೈನ್ ನೋಂದಣಿ ವ್ಯವಸ್ಥೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿ, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲ್ಲರೂ ಸೇರಿ ಸಂಭ್ರಮದಿಂದ ಆಚರಣೆ ಮಾಡೋಣ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರವೂ ಮುಖ್ಯ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಸಮ್ಮೇಳನಕ್ಕೆಂದು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳುವವರಿಗೆ ವಸತಿ ಒದಗಿಸುವ ಸ್ಥಳ, ವಿಳಾಸ, ನೋಡಲ್ ಅಧಿಕಾರಿಗಳ ಮೊಬೈಲ್ ಸಂಖ್ಯೆ ಹಾಗೂ ಫೋಟೋ ಸಹಿತ ಗುರುತಿನ ಚೀಟಿ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ, ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸ್ಿ, ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಚಾಲಕಿ ಡಾ.ಮೀರಾ ಶಿವಲಿಂಗಯ್ಯ, ಗೌರವ ಕಾರ್ಯದರ್ಶಿಗಳಾದ ಡಾ.ಕೃಷ್ಣೇಗೌಡ ಹುಸ್ಕೂರು, ಹರ್ಷ ಪಣ್ಣೆದೊಡ್ಡಿ, ಖಜಾಂಚಿ ಅಪ್ಪಾಜಪ್ಪ ಇತರರಿದ್ದರು.
ನೋಂದಣಿ ಪ್ರಕ್ರಿಯೆ ಹೇಗೆ?
ಸಮ್ಮೇಳನದ ಪ್ರತಿನಿಧಿಯಾಗಿ ನೋಂದಣಿ ಮಾಡಿಕೊಳ್ಳಲು ಕನ್ನಡ ಸಾಹಿತ್ಯ ಪರಿಷತ್ ವೆಬ್‌ಸೈಟ್ ಬಳಕೆ ಮಾಡಿಕೊಳ್ಳಬೇಕು. ಪರಿಷತ್‌ನ ಪೇಜ್ ತೆರೆಯುತ್ತಿದ್ದಂತೆ ಪ್ರತಿನಿಧಿಗಳ ನೋಂದಣಿ ಆಯ್ಕೆ ಮಾಡಿಕೊಂಡರೆ ಪ್ರಕ್ರಿಯೆ ಮುಂದುವರೆಯುತ್ತದೆ. ಮುಖ್ಯವಾಗಿ ಕನ್ನಡ ಸಾಹಿತ್ಯ ಪರಿಷತ್‌ನ ಸದಸ್ಯತ್ವ ಪಡೆದುಕೊಂಡಿದ್ದರೆ ಮಾತ್ರ ನೋಂದಣಿ ಮಾಡಿಕೊಳ್ಳಲು ಅವಕಾಶವಿರಲಿದೆ. ಅಂತೆಯೇ ನೋಂದಣಿಗೆ 600 ರೂ ಶುಲ್ಕ ನಿಗದಿಪಡಿಸಲಾಗಿದೆ. ನ.16ರಿಂದ 20 ದಿನಗಳವರೆಗೆ ಮಾತ್ರ ನೋಂದಣಿಗೆ ಅವಕಾಶವಿರಲಿದ್ದು, ಅರ್ಜಿ ಭರ್ತಿ ಮಾಡಿದ ಬಳಿಕ ಹಣ ಪಾವತಿಯನ್ನು ಆನ್‌ಲೈನ್‌ನಲ್ಲಿಯೇ ಮಾಡಬೇಕು. ನೋಂದಣಿ ಮಾಡಿಕೊಂಡವರಿಗೆ ವಿಶೇಷ ಸೌಲಭ್ಯ ಸಿಗಲಿದೆ.