ಮಂಡ್ಯ: ದ್ವಿತೀಯ ಪಿಯುಸಿ ತೇರ್ಗಡೆ ನಂತರ ಇಂಜಿನಿಯರ್ ಸೇರಬಯಸುವ ವಿದ್ಯಾರ್ಥಿಗಳಿಗೆ ಕೋರ್ಸ್‌ಗಳ ಬಗ್ಗೆ ಸಾಕಷ್ಟು ಗೊಂದಲವಿರುತ್ತದೆ. ಈ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಪ್ರತಿಷ್ಠಿತ ಶೈಕ್ಷಣಕ ಸಂಸ್ಥೆ ಪಿಇಟಿ(ಜನತಾ ಶಿಕ್ಷಣ ಸಂಸ್ಥೆ) ನಗರದಲ್ಲಿ ಆಯೋಜಿಸಿದ್ದ ‘ಓಪನ್ ಡೇ’ ಕಾರ್ಯಾಗಾರಕ್ಕೆ ಉತ್ತಮ ಸ್ಪಂದನೆ ಸಿಕ್ಕಿತು.
ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಜಿನಿಯರಿಂಗ್ ಪ್ರವೇಶಾತಿ ಕಾರ್ಯಾಗಾರದಲ್ಲಿ ಭಾಗವಹಿಸಲು ಮಂಡ್ಯ, ಮೈಸೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಿಂದ ವಿದ್ಯಾರ್ಥಿಗಳು ಹಾಗೂ ಪಾಲಕರು ಆಗಮಿಸಿದ್ದರು. ಮಾತ್ರವಲ್ಲದೆ ಇಂಜಿನಿಯರಿಂಗ್ ವಿಭಾಗದ ವಿವಿಧ ಕೋರ್ಸ್‌ಗಳ ಪ್ರವೇಶಾತಿ ಕುರಿತ ಕೆಸಿಇಟಿ ಕೌನ್ಸಿಲಿಂಗ್ ಪ್ರಕ್ರಿಯೆ ಕುರಿತು ಉಪಯುಕ್ತ ಮಾಹಿತಿ ಪಡೆದುಕೊಂಡು ಪಿಇಟಿಯ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಅವರ ಮಾರ್ಗದರ್ಶನದಲ್ಲಿ ಓಪನ್ ಡೇ ಕಾರ್ಯಾಗಾರ ಆಯೋಜಿಸುವ ನಿರ್ಧಾರ ಮಾಡಲಾಗಿತ್ತು. ಪ್ರಸಕ್ತ ವರ್ಷದಿಂದ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಇಂಜಿನಿಯರಿಂಗ್ ಪ್ರವೇಶಾತಿ ಕುರಿತ ಗೊಂದಲಗಳ ಕುರಿತು ತಜ್ಞರಿಂದ ಉಪನ್ಯಾಸ ಕೊಡಿಸುವ ಮಹತ್ವದ ಹೆಜ್ಜೆ ಇಟ್ಟಿತು. ಈ ಹಿನ್ನೆಲೆಯಲ್ಲಿ ನಿರೀಕ್ಷೆಯಂತೆ ವಿದ್ಯಾರ್ಥಿಗಳು ಆಗಮಿಸಿದರು. ಇಂಜಿನಿಯರಿಂಗ್ ಶಿಕ್ಷಣದ ಪ್ರಾಮುಖ್ಯತೆ ಮತ್ತು ಒಳನೋಟಗಳನ್ನು ಹಂಚಿಕೊಳ್ಳುವ ಹಾಗೂ ಕೆಸಿಇಟಿ ಕೌನ್ಸಿಲಿಂಗ್ ಪ್ರಕ್ರಿಯೆಯ ಉಪಯುಕ್ತ ಮಾಹಿತಿಯನ್ನು ಒದಗಿಸಲಾಯಿತು.
ಕಾಲೇಜಿನ ಪ್ಲೇಸ್‌ಮೆಂಟ್ ಸಭಾಂಗಣದಲ್ಲಿ ಬೆಳಗ್ಗೆ ಕಾರ್ಯಾಗಾರವನ್ನು ಉದ್ಘಾಟಿಸಿದ ಪಿಇಟಿ ಜಂಟಿ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಅತ್ಯಂತ ಮಹತ್ವದ್ದಾಗಿದೆ. ತಾಂತ್ರಿಕತೆ ಇಲ್ಲದೇ ಯಾವುದೇ ಕೆಲಸ ಕಾರ್ಯಗಳು ಸಾಗುವುದಿಲ್ಲ. ಹಾಗಾಗಿ ಇಂಜಿನಿಯರಿಂಗ್ ಶಿಕ್ಷಣವು ಭವಿಷ್ಯದ ವೃತ್ತಿಪರರನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಶಿಕ್ಷಣದ ಮೌಲ್ಯಗಳನ್ನು ವಿದ್ಯಾರ್ಥಿ ದಿಸೆಯಲ್ಲಿಯೇ ತಿಳಿದುಕೊಳ್ಳುವುದು ಮುಖ್ಯವಾಗಬೇಕು. ಅದರ ಒಳನೋಟಗಳನ್ನು ಇಂಜಿನಿಯರ್ ಪದವಿ ಪಡೆಯುವ ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು. ಇಂಜಿನಿಯರ್ ಪದವಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಯಾವುದೇ ಗೊಂದಲವಿದ್ದರೆ ಸಂಬಂಧಪಟ್ಟ ಉಪನ್ಯಾಸರಕರಲ್ಲಿ ಸರಿ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೆ.ವಿ.ಶಂಕರಗೌಡರ ದೂರದೃಷ್ಟಿಯಿಂದ ಸ್ಥಾಪನೆಯಾದ ಪಿಇಟಿ ಟ್ರಸ್ಟ್‌ನಿಂದ ಓಪನ್ ಡೇ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಿರುವುದು ಸಂತಸ ತರಿಸಿದೆ. ಈ ಪ್ರಯತ್ನ ಮಂಡ್ಯ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಅಪೇಕ್ಷಿತ ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳಿಗೆ ಒಂದು ಉತ್ತಮ ಅವಕಾಶವನ್ನು ಒದಗಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಂ.ನಂಜುಂಡಸ್ವಾಮಿ, ಉಪ ಪ್ರಾಂಶುಪಾಲ ಡಾ.ಎಸ್.ವಿನಯ್ ಇತರರಿದ್ದರು.
ಪಿಇಟಿ ಪ್ರಯತ್ನಕ್ಕೆ ಮೆಚ್ಚುಗೆ
ವಿಭಿನ್ನ ಆಲೋಚನೆಯೊಂದಿಗೆ ಮತ್ತು ಪ್ರಮುಖವಾಗಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಆಯೋಜಿಸಿದ ಓಪನ್ ಡೇ ಕಾರ್ಯಾಗಾರಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಕೆಸಿಇಟಿ ಸೆಲ್‌ನ ತಜ್ಞ ಉದಯಶಂಕರ್ ಅವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಅಧಿವೇಶನವನ್ನು ನಡೆಸಿದರು. ಜತೆಗೆ ಕೆಸಿಇಟಿ ಕೌನ್ಸೆಲಿಂಗ್‌ಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಂತರ ವಿದ್ಯಾರ್ಥಿಗಳು ಶಿಕ್ಷಕರು, ಹಿರಿಯ ಹಾಗೂ ಹಾಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಇದಲ್ಲದೆ ವಿವಿಧ ವಿಭಾಗಕ್ಕೆ ಸಂಬಂಧಿಸಿದಂತೆ ಪಿಇಎಸ್ ಕಾಲೇಜಿನ ವಿದ್ಯಾರ್ಥಿಗಳು ಸಿದ್ಧಪಡಿಸಿದ 20ಕ್ಕೂ ಹೆಚ್ಚು ಪ್ರಾಜೆಕ್ಟ್‌ಗಳ ಪ್ರದರ್ಶನ ನಡೆಯಿತು. ಇದಲ್ಲದೆ ವಿಭಾಗಕ್ಕೆ ಪ್ರತ್ಯೇಕ ಮಳಿಗೆ ತೆರೆಯಲಾಗಿತ್ತು. ವಿವಿಧೆಡೆಯಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಪ್ರಾಜೆಕ್ಟ್‌ಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಪ್ರಮುಖವಾಗಿ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಗುಣಮಟ್ಟದ ಶೈಕ್ಷಣಿಕ ವ್ಯವಸ್ಥೆ ಹಾಗೂ ಸೌಲಭ್ಯದ ಜತೆಗೆ ಆತಿಥ್ಯದ ಬಗ್ಗೆ ಪ್ರಶಂಸೆ ವ್ಯಕ್ತವಾಯಿತು. ಇಡೀ ದಿನ ಕಾರ್ಯಾಗಾರ ಆಯೋಜನೆಗೊಂಡಿದ್ದ ಹಿನ್ನೆಲೆಯಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು.