ಜಿಲ್ಲೆ

ಜನ ಮೆಚ್ಚುವಂತೆ ಮಾದರಿ ಕ್ರೀಡಾಕೂಟ ಆಯೋಜಿಸಿ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕ್ರೀಡಾಕೂಟದಲ್ಲಿ ರಾಜರ ಕಾಲದ ಇತಿಹಾಸ ಮರುಕಳಿಸಬೇಕು. ಇಡೀ ರಾಜ್ಯದ ಜನರು ಮೆಚ್ಚುವಂತಹ ಮಾದರಿ ಕ್ರೀಡಾಕೂಟವನ್ನು ಆಯೋಜನೆ ಮಾಡಬೇಕು ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ನಗರದ ಒಲಂಪಿಕ್ ಭವನದಲ್ಲಿ ಬುಧವಾರ ಆಯೋಜಿಸಿದ್ದ 2023ನೇ ಸಾಲಿನ ದಸರಾ ಕ್ರೀಡಾಕೂಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ದಸರಾ ಕ್ರೀಡಾಕೂಟದಲ್ಲಿ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ವಿಶೇಷ ಆದ್ಯತೆ ನೀಡಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಬೇಕು. ಊಟ, ವಸತಿ, ಬಸ್ ಸೇರಿದಂತೆ ಎಲ್ಲ ಸೌಲಭ್ಯ ನೀಡಬೇಕು. ಕಳೆದ ಸಾಲಿನಲ್ಲಿ ನಡೆದ ಕ್ರೀಡಾಕೂಟಕಿಂತಲೂ ಇನ್ನುಷ್ಟು ಮೆರಗು ನೀಡಲು ಅಧಿಕಾರಿಗಳು ಶ್ರಮಿಸಬೇಕು. ಯಾವುದೇ ತೊಂದರೆಯಾಗದ ರೀತಿ ಕ್ರೀಡಾಕೂಟವನ್ನು ಆಯೋಜಿಸಿ ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾಭಿಮಾನಿಗಳಿಗೆ ನೆರವಾಗಬೇಕು ಎಂದರು.

ಕ್ರೀಡಾಕೂಟಕ್ಕೆ ಅಗತ್ಯ ಅನುದಾನ ಪಡೆದು, ಯಾವುದೇ ಸಮಸ್ಯೆಗಳಾಗದಂತೆ ಎಚ್ಚರ ವಹಿಸಬೇಕು. ಅಕ್ಟೋಬರ್ 11 ರಿಂದ 21 ರವರೆಗೆ ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಸೂಚಿಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಕರ್ನಾಟಕ ಒಲಂಪಿಕ್ಸ್ ಅಸೋಷಿಯೇಷನ್ ಅಧ್ಯಕ್ಷ ಡಾ.ಕೆ.ಗೋವಿಂದರಾಜ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಆಯುಕ್ತ ಶಶಿಕುಮಾರ್, ಉಪ ನಿರ್ದೇಶಕ ಜಿತೇಂದ್ರ ಶೆಟ್ಟಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಇತರರಿದ್ದರು.