ಮಂಡ್ಯ: ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರ ಪಾವತಿ ಹಾಗೂ ಪೌರ ಕಾರ್ಮಿಕರ ನೇಮಕಾತಿಗೆ ಆಗ್ರಹಿಸಿ ಫೆ.15ರಂದು ಹೊರಗುತ್ತಿಗೆ ನೌಕರರು ಹಾಗೂ ಪೌರ ಕಾರ್ಮಿಕರ ನಡಿಗೆ ಮುಖ್ಯಮಂತ್ರಿ ಮನೆ ಕಡೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ತಿಳಿಸಿದರು.
ನೀರುಗಂಟಿ, ಲೋಡರ್ಸ್ ಕ್ಲೀನರ್ಸ್, ಹೆಲ್ಪರ್ಸ್, ಯೂಜಿಡಿ ಕಾರ್ಮಿಕರು ಸೇರಿದಂತೆ ಎಲ್ಲ ಬಗೆಯ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ಒಳಪಡಿಸುವಂತೆ ಹಾಗೂ ಪೌರ ಕಾರ್ಮಿಕರ ಬಾಕಿ ಹುದ್ದೆಗಳ ನೇಮಕಾತಿಗೆ ಫೆ.13ರಿಂದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳ ಎಲ್ಲ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ತರಲು ಬಜೆಟ್‌ನಲ್ಲಿ ಘೋಷಣೆ ಮಾಡಬೇಕು. ಪೌರಾಡಳಿತ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಅಗತ್ಯಕ್ಕನುಗುಣವಾಗಿ ಪೌರಚಾಲಕ ಹುದ್ದೆಗಳನ್ನು ಸೃಷ್ಟಿಸಬೇಕು. ಸಂಕಷ್ಟ ಭತ್ಯೆಯನ್ನು ನೇರಪಾವತಿ ಹಾಗೂ ಗುತ್ತಿಗೆ ಪೌರಕಾರ್ಮಿಕರಿಗೂ ವಿಸ್ತರಿಸಬೇಕು. ಬಾಕಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿ ಸೇರಿದಂತೆ ನಾಲ್ಕು ಬೇಡಿಕೆಗಳನ್ನು ಬಜೆಟ್‌ನಲ್ಲಿ ಘೋಷಿಸಬೇಕೆಂದು ಒತ್ತಾಯಿಸಲಾಗುವುದು ವಿವರಿಸಿದರು.
ಜಿಲ್ಲಾಧ್ಯಕ್ಷ ಎನ್.ನಾಗರಾಜು, ಎಂ.ಮಹದೇವು, ಎಂ.ಗಣೇಶ, ರಾಜೇಶ್ ಇದ್ದರು.