ಹಿರಿಯ ಸಿವಿಲ್ ನ್ಯಾಯಾಧೀಶ ಮಹೇಶ್ ಸಲಹೆ
- ಪಾಂಡವಪುರ : ಸ್ವಚ್ಚತಾ ಕಾರ್ಯಕ್ರಮಗಳು ಒಂದು ದಿನಕ್ಕೆ ಸೀಮಿತವಾಗಬಾರದು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಹೇಶ್ ಸಲಹೆ ನೀಡಿದರು.ಸ್ವಚ್ಛ ಭಾರತ್ ಅಭಿಯಾನದಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ನಗರಾಭಿವೃದ್ಧಿ ಇಲಾಖೆ, ಸ್ವಚ್ಛ ಭಾರತ್ ಮಿಷನ್, ಪೌರಾಡಳಿತ ನಿರ್ದೇಶನಾಲಯ, ಪುರಸಭೆ ಸಹಕಾರದೊಂದಿಗೆ ಗುರುವಾರ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಶ್ರಮದಾನ ಕಾರ್ಯಕ್ರಮದಲ್ಲಿ ಕಸ ಗುಡಿಸಿ ಅವರು ಮಾತನಾಡಿದರು. ಹೊಸಲು ಹೆಚ್ಚಾದರೆ ಸಾಂಕ್ರಾಮಿಕ ಕಾಯಿಲೆಗಳು ಹರಡುತ್ತದೆ. ಹೀಗಾಗಿ ನಾವು ಶುದ್ಧತೆ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಮಹತ್ವದ ಕಾರ್ಯಕ್ರಮಕ್ಕೆ ಎಲ್ಲರೂ ಅಗತ್ಯ ಸಹಕಾರ ನೀಡಬೇಖು. ರೋಗಗಳಿಂದ ಮುಕ್ತರಾಗಿ ಬದುಕಬೇಕು ಎಂದರು.
ಪ್ರತಿಯೊಬ್ಬರೂ ಪಾಲ್ಗೊಳ್ಳಿ:
ಅಪರ ಸಿವಿಲ್ ನ್ಯಾಯಾಧೀಶ ಕೆ.ಎನ್.ಕಿಶೋರ್‌ಕುಮಾರ್ ಮಾತನಾಡಿ, ಶುದ್ಧತೆ ಪಾಲನೆಗೆ ಅರಿವು ಮೂಡಿಸುವ ಸಲುವಾಗಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಕಸ ಗುಡಿಸಿ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಇದರ ಉದ್ದೇಶ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳು ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಂಡು ಸುತ್ತಲಿನ ಪ್ರದೇಶವನ್ನು ಸುಂದರವಾಗಿ ಇಟ್ಟುಕೊಳ್ಳಲಿ ಎಂಬುದಾಗಿದೆ. ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬ ನಾಗರಿಕನೂ ಪಾಲ್ಗೊಂಡು ಯೋಜನೆ ಯಶಸ್ಸಿಗೆ ಸಹಕರಿಸಬೇಕು ಎಂದರು.