ಜಿಲ್ಲೆ

ಪರಿಸರ ಮಾಲಿನ್ಯ ನಿಯಂತ್ರಣದ ಜಾಗೃತಿ ಮೂಡಿಸಿ: ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್ ಹೇಳಿಕೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಪರಿಸರ ಮಾಲಿನ್ಯ ನಿಯಂತ್ರಣದ ಬಗ್ಗೆ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವುದು ಅತ್ಯಾವಶ್ಯಕ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್ ತಿಳಿಸಿದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಕಾವೇರಿ ಉದ್ಯಾನದಲ್ಲಿ ಜಿಲ್ಲಾಡಳಿತ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಮಂಗಲ ಸಹಯೋಗದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಪರಿಸರ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಹೊಣೆ ಎಂದರು.

ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಮಾತನಾಡಿ, ಪರಿಸರ ರಕ್ಷಣೆ ಅಂಗವಾಗಿ ವಿದ್ಯಾರ್ಥಿಗಳು ತಮ್ಮ ಮನೆ, ಶಾಲಾ, ಕಾಲೇಜಿನ ಸುತ್ತಮುತ್ತ ಇರುವ ಖಾಲಿ ಸ್ಥಳಗಳಲ್ಲಿ, ಹೊಲ ಗದ್ದೆಗಳಲ್ಲಿ ಗಿಡ ನೆಡುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗಬೇಕು. ಜೂ.5ರಂದು ಮೈಷುಗರ್ ಆವರಣದಲ್ಲಿ ಸಸ್ಯೋತ್ಸವ ಹಾಗೂ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಪರಿಸರ ಅಧಿಕಾರಿ ಬಿ.ಪಿ.ಗೀತಾ ಅವರು ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ.ಯೋಗೇಶ್, ಉಪಪರಿಸರ ಅಧಿಕಾರಿಗಳಾದ ಭವ್ಯಾ, ಅಶ್ವಿನಿ, ಶಿಕ್ಷಣ ಸಂಯೋಜಕ ಬಿ.ಎಲ್.ಮಧುಸೂದನ್, ಜಾನಪದ ಗಾಯಕ ಸಂತೆಕಸಲಗೆರೆ ಬಸವರಾಜು, ಪ್ರೌಢಶಾಲಾ ಶಿಕ್ಷಕರಾದ ಶಿವಕುಮಾರ್, ಮಹಾಂತ ದೇವರು ಇತರರಿದ್ದರು.