ಜಿಲ್ಲೆ

ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ

ತುಮಕೂರು ಡೆಸ್ಕ್

ಶಾಸಕ ಕೆ.ಷಡಕ್ಷರಿ ಅನಿಸಿಕೆ - ಕ್ರೀಡಾಕೂಟಕ್ಕೆ ಚಾಲನೆ 

ತಿಪಟೂರು: ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ. ವಿದ್ಯಾರ್ಥಿ ದಿಸೆಯಲ್ಲಿಯೇ ಕ್ರೀಡಾಸಕ್ತಿ ಬೆಳೆಸಿಕೊಳ್ಳುವ ಮೂಲಕ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಪಟುಗಳಾಗಿ ದೇಶಕ್ಕೆ ಕೀರ್ತಿ ತರಬೇಕು ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ತಾಲೂಕು ಪದವಿ ಪೂರ್ವ ಕಾಲೇಜುಗಳ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್​ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ಮಧ್ಯದ ಪಾಠಕ್ಕೆ ಸೀಮಿತವಾಗದೆ ಪಠ್ಯದ ಜತೆಯಲ್ಲಿ ಕ್ರೀಡೆಗೂ ಹೆಚ್ಚಿನ ಪ್ರಾತಿನಿಧ್ಯತೆ ನೀಡಬೇಕು. ಕ್ರೀಡಾಪಟು ಸೋಲು-&ಗೆಲುವಿನ ಚಿಂತನೆ ಮಾಡುವುದಕ್ಕಿಂತಲೂ ಕ್ರೀಡೆಯಲ್ಲಿ ಭಾಗವಹಿಸುವಿಕೆ ಅತಿಮುಖ್ಯ ಎಂದ ಅವರು, ಮುಂದಿನ ದಿನಗಳಲ್ಲಿ ಕ್ರೀಡೆಗೆ ಬೇಕಾದ ಅಗತ್ಯ ಮೂಲಸೌಕರ್ಯ ಒದಗಿಸುವ ಭರವಸೆ ನೀಡಿದರು.
ಉಪವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ ಮಾತನಾಡಿ, ಸದೃಢ ದೇಹ, ಸ್ವಸ್ಥ ಆರೋಗ್ಯ ಮತ್ತು ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆ ನಮ್ಮನ್ನು ದೈಹಿಕವಾಗಿ ಕ್ರಿಯಾಶೀಲರನ್ನಾಗಿಸುತ್ತದೆ. ಮಕ್ಕಳು ಶೈಕ್ಷಣಿಕ ಪ್ರಗತಿಯ ಜತೆಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು. ಜಿಲ್ಲಾಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟವನ್ನು ಪ್ರತಿನಿಧಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.
ಕ್ರೀಡಾ ಜ್ಯೋತಿ ಸ್ವೀಕರಿಸಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ. ಬಾಲಗುರುಮೂರ್ತಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಕ್ರೀಡೆಯಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಪ್ರೇರಣೆಯಾಗಿಸಿಕೊಳ್ಳಬೇಕು ಎಂದರು.
ಡಿವೈಎಸ್​ಪಿ ವಿನಾಯಕ ಎನ್​. ಶೆಟಗೇರ ಕ್ರೀಡಾಪ್ರತಿಜ್ಞೆ ಬೋಧಿಸಿದರು. ನೋಡಲ್​ ಅಧಿಕಾರಿ ಎಂ.ಡಿ.ಶಿವಕುಮಾರ್​ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಜಿಲ್ಲಾ ಪ್ರಾಚಾರ್ಯ ಸಂಘದ ಅಧ್ಯಕ್ಷ ಪ್ರಭಾಕರ್​ರೆಡ್ಡಿ, ಕಸಾಪ ತಾಲೂಕು ಅಧ್ಯಕ್ಷ ಬಸವರಾಜಪ್ಪ, ರಾಜ್ಯ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಬಸವರಾಜು, ಕ್ರೀಡಾಕೂಟ ಸಂಚಾಲಕ ಚಂದ್ರಶೇಖರ್​, ಪ್ರಾಂಶುಪಾಲರಾದ ಬಿ. ಪ್ರದಿಪ್​, ಕೆ.ಎನ್​.ರೇಣುಕಯ್ಯ, ಬಿ.ನಾಗರಾಜು ಹಾಗೂ ವಿವಿಧ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಇದ್ದರು.