ಹನುಮಸಾಗರ ಸಮೀಪದ ಹನುಮನಾಳದಲ್ಲಿ ಹಮ್ಮಿಕೊಂಡ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಅಧಿಕಾರಿ ನಲಿನ ಅತುಲ್ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆ, ಗ್ರಾಪಂ ಅಧ್ಯಕ್ಷೆ ಸುಜಾತ ಚಿಕನಾಳ, ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹೇಮಂತಕುಮಾರ್, ಉಪವಿಭಾಗಾಧಿಕಾರಿ ಡಾ.ಮಹೇಶ ಮಾಲಗಿತ್ತಿ, ತಹಸೀಲ್ದಾರ್ ಅಶೋಕ ಶಿಗ್ಗಾವಿ ಇತರರಿದ್ದರು. 
ಜಿಲ್ಲೆ

ಜನಸ್ಪಂದನ ಕಾರ್ಯಕ್ರಮ ಸದ್ಬಳಕೆಯಾಗಲಿ

Kopala - Desk - Eraveni

ಹನುಮಸಾಗರ: ನಿಮ್ಮ ಸಮಸ್ಯೆಗಳು ಕಾನೂನಾತ್ಮಕವಾಗಿದ್ದರೆ ಸ್ಥಳದಲ್ಲೇ ಪರಿಹಾರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಸಮೀಪದ ಹನುಮನಾಳ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಂಗಳವಾರ ಹಮ್ಮಿಕೊಂಡ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಲೂಕು ಕೇಂದ್ರ ಸ್ಥಾನದಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಬರಲು ಗ್ರಾಮೀಣರಿಗೆ ಆಗುವ ತೊಂದರೆಗಳನ್ನು ಮನಗಂಡು ಹೋಬಳಿ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು. ಇತ್ತೀಚೆಗೆ ಜಿಲ್ಲಾ ಆಡಳಿತದಿಂದ ಹಮ್ಮಿಕೊಂಡ ಜನಸ್ಪಂದನ ಕಾರ್ಯಕ್ರಮದಲ್ಲಿ ಸುಮಾರು 2300 ಅರ್ಜಿಗಳು ಬಂದಿದ್ದು, ಅವುಗಳಲ್ಲಿ 58ಅರ್ಜಿಗಳು ಮಾತ್ರ ಬಾಕಿ ಇದ್ದು ಉಳಿದವು ಬಗೆಹರಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಜಾರಿಗೆ ತಂದಿದ್ದು, ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ ಸುಮಾರು 3ಲಕ್ಷ 10ಸಾವಿರಕ್ಕೂ ಹೆಚ್ಚು ಮಹಿಳೆಯರ ಖಾತೆಗೆ 654 ಕೋಟಿ ಹಣ ಜಮಾ ಮಾಡಿದ್ದು, ಹನುಮನಾಳ ಹೋಬಳಿ ವ್ಯಾಪ್ತಿಯಲ್ಲಿ 11700 ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ.

ಅನ್ನಭಾಗ್ಯ ಯೋಜನೆ ಅಡಿಯಲ್ಲಿ 3ಲಕ್ಷ 28 ಸಾವಿರ ಪಡಿತರ ಚೀಟಿ ವಿತರಣೆ ಮಾಡಿದ್ದು, 3ಲಕ್ಷ ಪಡಿತರದಾರರಿಗೆ 280ಕೋಟಿ ಹಣ ಜಮಾ ಮಾಡಲಾಗಿದೆ. ಹನುಮನಾಳ ಹೋಬಳಿಯಲ್ಲಿ 9925 ಕುಟುಂಬಕ್ಕೆ 63 ಲಕ್ಷ ರೂ. ಜಮಾ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 2ಲಕ್ಷ 74ಸಾವಿರ ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಇದಕ್ಕೆ 136 ಕೋಟಿ ಖರ್ಚಾಗಿದೆ.

ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿ ತಿಂಗಳು ಸುಮಾರು 30ರಿಂದ 35ಲಕ್ಷ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 5ಸಾವಿರ ಯುವಕ - ಯುವತಿಯರಿಗೆ 3ಕೋಟಿ 35ಲಕ್ಷ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೆರೆಗೆ ನೀರು ಬಿಡಲು ಕ್ರಮಕೈಗೊಳ್ಳಿ.
ಬಾದಿಮನಾಳ ಕೆರೆಗೆ ನೀರು ಬಿಟ್ಟಿಲ್ಲ ಎಂದು ಸುತ್ತಮುತ್ತಲಿನ ಗ್ರಾಮಸ್ಥರು ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿ, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳನ್ನು ಕರೆಸಿ, ಕೆರೆವರೆಗೂ ಪೈಪ್‌ಲೈನ್ ಅಳವಡಿಕೆ ಮಾಡಿದ್ದು, ನೀರಿಗೆ ಸಮಸ್ಯೆಯಿಲ್ಲ. ನಮ್ಮ ಬಳಿ ತುಂಬಾ ನೀರು ಇದೆ ಯಾಕೆ ಬಿಟ್ಟಿಲ್ಲವೆಂದು ತರಾಟೆಗೆ ತೆಗೆದುಕೊಂಡು ಕೂಡಲೇ ಕೆಬಿಜೆಎನ್ ಎಲ್ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಸಾಮಾಜಿಕ ಭದ್ರತಾ ಯೋಜನೆಯಡಿ ಅನೇಕರಿಗೆ ಮಾಸಾಶನ ಮಂಜೂರು ಮಾಡಲು ಆಗಿರುವ ಸಮಸ್ಯೆಗಳನ್ನು ಕೂಡಲೇ ಬಗೆಯರಿಸಲು ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆಯಿಂದ ಔಷಧಿ ಸಿಂಪರಣೆ ಮಾಡುವ ಯಂತ್ರ ಪ್ರಾತ್ಯಕ್ಷಿಕೆ ಮಾಡಲಾಯಿತು. ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸೇರಿ ವಿವಿಧ ಇಲಾಖೆಗಳಿಂದ ಮಳಿಗೆಗಳನ್ನು ತೆರೆಯಲಾಗಿತ್ತು. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ, ಗ್ರಾಪಂ ಅಧ್ಯಕ್ಷೆ ಸುಜಾತ ಚಿಕನಾಳ, ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹೇಮಂತಕುಮಾರ್, ಉಪವಿಭಾಗಾಧಿಕಾರಿ ಡಾ.ಮಹೇಶ ಮಾಲಗಿತ್ತಿ, ತಹಸೀಲ್ದಾರ್ ಅಶೋಕ ಶಿಗ್ಗಾವಿ ಇರರಿತರಿದ್ದರು.