ಚಿಕ್ಕಮಗಳೂರು: ಜಿಲ್ಲಾಡಳಿತದ ಅನುಮತಿ ಪಡೆಯದೆ ನಗರದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಡಿಸಿ ಡಾ. ಬಗಾದಿ ಗೌತಮ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಹಾಗೂ ಜಿಲ್ಲಾಡಳಿತದ ಅನುಮತಿ ಪಡೆಯದೆ ಜೂ.29ರಂದು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ನಗರದಲ್ಲಿ ಸೈಕಲ್ ಜಾಥಾ ನಡೆಸಿ ಕಾನೂನು ಉಲ್ಲಂಘಿಸಿದ್ದಾರೆ. ಜಾಥಾ, ಪ್ರತಿಭಟನೆ, ಬಹಿರಂಗ ಸಭೆ ನಡೆಸುವ ಮುನ್ನ ಪೊಲೀಸ್ ಇಲಾಖೆ ಅನುಮತಿ ಪಡೆಯಬೇಕು. ಒಂದು ರಾಷ್ಟ್ರೀಯ ಪಕ್ಷವಾಗಿ ಕಾನೂನು ಉಲ್ಲಂಘಿಸಿ ಎಂ.ಜಿ.ರಸ್ತೆ, ಐ.ಜಿ.ರಸ್ತೆ ಸೇರಿ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿರುವುದು ಸರಿಯಲ್ಲ ಎಂದು ದೂರಿದರು.
ಕರೊನಾ ಸೋಂಕು ಭೀತಿ ನಡುವೆ ಕಾನೂನು ಉಲ್ಲಂಘಿಸಿ ಪ್ರತಿಭಟನೆ ಮಾಡಿರುವುದು ಎಷ್ಟು ಸರಿ? ಸೋಂಕು ಹರಡದಂತೆ ತಡೆಗಟ್ಟಲು ಪರಸ್ಪರ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಉಪಯೋಗಿಸುವುದು ಕಡ್ಡಾಯವಾಗಿದ್ದರೂ ನಿಯಮ ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದರು.
ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್, ನಗರಾಧ್ಯಕ್ಷ ಮಧುಕುಮಾರ್ ರಾಜ್ ಅರಸ್, ಕಾರ್ಯದರ್ಶಿ ಎಂ.ಜಿ.ಬಸವರಾಜ್, ಈಶ್ವರಹಳ್ಳಿ ಮಹೇಶ್, ಯುವ ಮೋರ್ಚಾ ನಗರಾಧ್ಯಕ್ಷ ಕಿರಣ್, ಕೇಶವಮೂರ್ತಿ, ದಿನೇಶ್ ಇತರರಿದ್ದರು.