ಜಿಲ್ಲೆ

ಪ್ಲಾಸ್ಟಿಕ್ ಉತ್ಪನ್ನ ತಯಾರಿಕೆ ಘಟಕ ಸೀಜ್

Dharwada - Santosh Vaidya

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆ ಕೈಗಾರಿಕಾ ವಸಾಹತು ಪ್ರದೇಶ (ಹಂತ 1)ದಲ್ಲಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳ ತಯಾರಿಕಾ ಘಟಕವನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ರಜಲಿ ಪಾಲಿ ಪ್ರಾಡಕ್ಟ್ ಪ್ರೖೆವೇಟ್ ಲಿಮಿಟೆಡ್ ಉದ್ಯಮದ ಮೇಲೆ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದರು. ದಾಳಿ ವೇಳೆ ಸುಮಾರು 10 ಲಕ್ಷ ರೂ. ಮೌಲ್ಯದ 11765 ಕೆಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಉದ್ಯಮದಲ್ಲಿ ಅಪಾರ ಪ್ರಮಾಣದಲ್ಲಿ ಕಚ್ಚಾ ವಸ್ತುಗಳು ಇದ್ದವು.

ಉದ್ಯಮದಲ್ಲಿ 50 ಮೈಕ್ರಾನ್​ಗಿಂತ ಕಡಿಮೆ ದರ್ಜೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬೃಹತ್ ಪ್ರಮಾಣದಲ್ಲಿ ತಯಾರಿಸಲಾಗುತ್ತಿತ್ತು. ಇದು ಉತ್ಪಾದಕ ಘಟಕವಾಗಿರುವುದರಿಂದ ಬಂದ್ ಮಾಡಿಸಲಾಗಿದೆ. ವಶಪಡಿಸಿಕೊಂಡಿರುವ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ನಿಖರ ಲೆಕ್ಕ (ತೂಕ) ಮಾಡಿದ ಮೇಲೆ ದಂಡದ ಪ್ರಮಾಣ ನಿಗದಿ ಪಡಿಸಲಾಗುವುದು ಎಂದು ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ ಬಿ.ಎಂ. ತಿಳಿಸಿದ್ದಾರೆ.

ಸಹಾಯಕ ಆಯುಕ್ತ ಗಿರೀಶ ತಳವಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಸೋಮಶೇಖರ ಹಿರೇಗೌಡರ್, ಪೊಲೀಸ್ ಇಲಾಖೆ ಅಧಿಕಾರಿಗಳು, ಇತರರು ಇದ್ದರು.