Gavel on desk. Isolated with good copy space. Dramatic lighting. 
ಜಿಲ್ಲೆ

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಸಾಬೀತು ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

reportermng

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಮಂಗಳೂರಿನ ನ್ಯಾಯಾಲಯ 20 ವರ್ಷಗಳ ಕಠಿನ ಸಜೆ ವಿಧಿಸಿ ತೀರ್ಪು ನೀಡಿದೆ.


ಕಾವೂರು ಮರಕಡ ಸಮೀಪದ ನಿವಾಸಿ, ಬಸ್ ಚಾಲಕ ದಯಾನಂದ ದಾನಣ್ಣನವರ್(30) ಶಿಕ್ಷೆಗೊಳಗಾದ ಅಪರಾಧಿ. ಈತ 13 ವರ್ಷದ ಬಾಲಕಿ(ವಿದ್ಯಾರ್ಥಿನಿ)ಯೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡಿದ್ದ. 2022ರ ಜ.27ರಂದು ಹೊರಗಡೆ ತಿರುಗಾಡುವುದಕ್ಕೆ ಬರುವಂತೆ ಸಂದೇಶ ಕಳುಹಿಸಿದ್ದ. ಬಾಲಕಿ ಇದಕ್ಕೆ ನಿರಾಕರಿಸಿದ್ದಳು. ಆದರೂ ಆತ ಒತ್ತಾಯ ಮಾಡಿ ಪುಸಲಾಯಿಸಿ ಜ.28ರಂದು ಆಟೋರಿಕ್ಷಾದಲ್ಲಿ ಮಂಗಳೂರಿನ ಹಂಪನಕಟ್ಟೆಗೆ ಕರೆದೊಯ್ದು ಲಾಡ್ಜ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ. ಬಳಿಕ ಮನೆ ಬಳಿ ಕರೆತಂದು ಬಿಟ್ಟು ಹೋಗಿದ್ದ. ಮನೆಯಲ್ಲಿ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಬಾಲಕಿ ಮನೆಯಲ್ಲಿ ನಡೆದ ವಿಷಯ ತಿಳಿಸಿದ್ದಳು. ಮನೆಯವರು ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-2 ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಂ. ರಾಧಾಕೃಷ್ಣ ಅವರು ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಪೊಕ್ಸೋ ಕಲಂ 4ರಡಿ 20 ವರ್ಷ ಕಠಿನ ಸಜೆ, 50,000 ರೂ. ದಂಡ ವಿಧಿಸಿ, ದಂಡ ಪಾವತಿಸಲು ತಪ್ಪಿದರೆ ಮತ್ತೆ 4 ತಿಂಗಳು ಕಠಿನ ಸಜೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ. ನೊಂದ ಬಾಲಕಿಗೆ 3 ಲ.ರೂ. ಪರಿಹಾರ ನೀಡಬೇಕು. ಅದರಲ್ಲಿ 1 ಲ.ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಿ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು. ಉಳಿದ 2 ಲ.ರೂ.ಗಳನ್ನು ಆಕೆಯ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಠೇವಣಿ ಇಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.


ಮಹಿಳಾ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಎಸ್.ಎಚ್.ಭಜಂತ್ರಿ ಮತ್ತು ರೇವತಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ಸರ್ಕಾರದ ಪರವಾಗಿ ವಾದಿಸಿದ್ದರು.