ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ಹಿಂದೂಪರ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟ್ ತೆರೆಯಲು ಚಾಮರಾಜಪೇಟೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಚಾಮರಾಜಪೇಟೆ, ರಾಮನಗರ ಹಾಗೂ ವಿಜಯನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪುನೀತ್ ಗಲಾಟೆ, ದೊಂಬಿ, ಕೊಲೆ ಬೆದರಿಕೆ ಹಾಗೂ ಹಲ್ಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಶೀಟ್ ತೆರೆಯಲು ತನ್ನ ವ್ಯಾಪ್ತಿಯ ಎಸಿಪಿ ಅವರಿಗೆ ವರದಿ ಸಲ್ಲಿಸಲಾಗಿದೆ.
ಈ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಚಿಕ್ಕಪೇಟೆ ಉಪ ವಿಭಾಗದ ಎಸಿಪಿ, ಕೆರೆಹಳ್ಳಿಗೆ ನೊಟೀಸ್ ಜಾರಿ ಮಾಡಿದ್ದಾರೆ. ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಹಾಗೂ ಇನ್ನಿತರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ವಿರುದ್ಧ ಏಕೆ ರೌಡಿಪಟ್ಟಿ ತೆರೆಯಬಾರದು ಎಂಬುದಕ್ಕೆ ಕೂಡಲೇ ವಿವರಣೆ ಸಲ್ಲಿಸಬಹುದು. ವಿವರಣೆ ನೀಡದಿದ್ದಲ್ಲಿ ಏನೂ ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು ಎಂದು ಪುನೀತ್ಗೆ ನೋಟಿಸ್ ಜಾರಿ ಮಾಡಿದ್ದಾರೆ.