ಗದಗ: ಪೊಲಿಯೋ ಮುಕ್ತ ಜಿಲ್ಲೆಯಾಗಿಸಲು ಸಾರ್ವಜನಿಕರು ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ನಗರದ ಹೊಸ ಬಸ್ ನಿಲ್ದಾಣದಲ್ಲಿ ಸೋಮವಾರದಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ವಸ್ತು ಪ್ರದರ್ಶನದ ಉದ್ಘಾಟಸಿ ನಂತರ ಮಗುವಿಗೆ ಪೊಲೀಯೋ ಲಸಿಕೆ ನೀಡಿ ಅವರು ಮಾತನಾಡಿದರು.
ರಾಷ್ಟ್ರೀಯ ಪೋಲಿಯೋ ಅಭಿಯಾನದಲ್ಲಿ ಗದಗ ಜಿಲ್ಲೆಯ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ತಮ್ಮ ಸಮೀಪದ ಲಸಿಕಾ ಕೇಂದ್ರದಲ್ಲಿ ಪೋಲಿಯೋ ಹನಿ ಹಾಕಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಮೀನಾಕ್ಷಿ ಕೆ.ಎಸ್ ಅವರು ಮಾತನಾಡಿ ಜಿಲ್ಲೆಯಲ್ಲಿ ಒಟ್ಟು 129327 ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು ಆ ಪೈಕಿ ಮಾರ್ಚ 3 ರವರೆಗೆ 1,20,185 ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕಲಾಗಿದೆ.
ತಾಲೂಕಾವಾರು ಲಸಿಕೆ ಹಾಕಿದ ವಿವರ ಇಂತಿದೆ: ಗದಗ- 43,059, ಮುಂಡರಗಿ- 13,582, ನರಗುಂದ- 10,124, ರೋಣ- 31,264, ಶಿರಹಟ್ಟಿ- 22,156 ಎಂದು ಈ ಸಂದರ್ಭದಲ್ಲಿ ತಿಳಿಸಿದರು.