ಉಡುಪಿ: ಮಕ್ಕಳು ಹುಟ್ಟಿನಿಂದ ಅಂಗವೈಕಲ್ಯದಂತಹ ಸಮಸ್ಯೆಗಳಿಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗಿದ್ದು, ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
ಭಾನುವಾರ ಸರ್ಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಮತಾ ಜಿ. ಎಸ್., ನಿಗದಿತ ಸಮಯದಲ್ಲಿ ಮಕ್ಕಳಿಗೆ ಅಗತ್ಯ ಲಸಿಕೆಯನ್ನು ಒದಗಿಸುವುದು ಪೋಷಕರ ಜವಾಬ್ದಾರಿ. ಲಸಿಕೆ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದರು.
ರೋಟರಿ ಸಂಸ್ಥೆಯ ಅಧ್ಯಕ್ಷೆ ದೀಪಾ, ಪೌರಯುಕ್ತ ರಾಯಪ್ಪ, ಡಿ.ಜೆ.ಡಿ ಕಚೇರಿಯ ಉಪನಿರ್ದೇಶಕಿ ಡಾ. ಮಲ್ಲಿಕಾ, ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ, ಎಂ.ಸಿ.ಎಚ್. ಆಸ್ಪತ್ರೆ ಅಧೀಕ್ಷಕ ಡಾ.ರಾಜಗೋಪಾಲ ಭಂಡಾರಿ, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಉಪಸ್ಥಿತರಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ್ ಸ್ವಾಗತಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ನಿರೂಪಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ವಂದಿಸಿದರು.