ಮೈಸೂರು: ಕೇಂದ್ರ ಬಿಜೆಪಿ ಸರ್ಕಾರ ಅಭಿವೃದ್ಧಿಯನ್ನು ಸಂಪೂರ್ಣ ಮರೆತು ಧ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ಸೋಮಶೇಖರ ಹೇಳಿದರು.
ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೀಸಲಾತಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಐಐಎಂ, ಐಐಟಿಯಲ್ಲಿ 60 ಸಾವಿರ ವಿದ್ಯಾರ್ಥಿಗಳು ಜಾತಿ ತಾರತಮ್ಯ ತಾಳಲಾರದೆ ಶಿಕ್ಷಣ ಮೊಟಕುಗೊಳಿಸಿದ್ದಾರೆ. ಕೇಂದ್ರ ಸರ್ಕಾರ ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ವಿರೋಧಿಯಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸ್ಪರ್ಧಿಸುವ ಆಕಾಂಕ್ಷೆಯನ್ನು ಹೊಂದಿದ್ದೇನೆ. ಒಂದುವೇಳೆ ಚಾಮರಾಜನಗರ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದರೆ ಅವರ ಗೆಲುವಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ದೇವನೂರು ಶಿವಮಲ್ಲು, ನಾಗೇಶ್ ಇದ್ದರು.