ಜಿಲ್ಲೆ

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಮತದಾನ ನಾಳೆ

ಆರ್.ತುಳಸಿಕುಮಾರ್

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ (ಜೂ.3) ಮತದಾನ ನಡೆಯಲಿದ್ದು, ಈ ಸಂಬಂಧ ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾನುವಾರ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಚುನಾವಣೆಗೆ ನಿಯೋಜನೆಯಾಗಿರುವ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಮಸ್ಟರಿಂಗ್ ಕೇಂದ್ರದಿಂದ ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್ ಸೇರಿ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ನಿಯೋಜಿಸಲ್ಪಟ್ಟ ವಾಹನಗಳ ಮೂಲಕ ಪೊಲೀಸ್ ಬಂದೋಬಸ್ತ್‌ನಲ್ಲಿ ಮತಗಟ್ಟೆಗಳಿಗೆ ತೆರಳಿದರು.

106 ಮತಗಟ್ಟೆ ಸ್ಥಾಪನೆ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲಿ 106 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅದಕ್ಕೂ ಮುನ್ನ ಬೆಳಗ್ಗೆ 7ಕ್ಕೆ ಅಣುಕು ಮತದಾನ ನಡೆಯಲಿದ್ದು, 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದೆ.

ಪರಿಶೀಲನೆಯ ವೇಳೆ ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ.ಹರೀಶ್ ಕುಮಾರ್, ಸ್ನೇಹಲ್, ವಿನೋತ್ ಪ್ರಿಯಾ, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ರವಿಚಂದ್ರ ನಾಯ್ಕ ಉಪಸ್ಥಿತರಿದ್ದರು.