ಮಡಿಕೇರಿ:
ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ, ಮೀಸಲಾತಿ ಹಾಗೂ ಸರ್ಕಾರದ ಕಾರ್ಯಕ್ರಮ ರೂಪಿಸಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಆ ದಿಸೆಯಲ್ಲಿ ಸಮೀಕ್ಷೆಯಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮನವಿ ಮಾಡಿದ್ದಾರೆ.
ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ಅಪಪ್ರಚಾರ ಮಾಡುತ್ತಿದ್ದು, ರಾಜಕೀಯ ಪ್ರೇರಿತವಾಗಿದೆ ಎಂದರು.
ಸಂವಿಧಾನ ಅರ್ಥ ಮಾಡಿಕೊಳ್ಳುವವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುವುದಿಲ್ಲ. ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಡಿ ಎಂದು ಬಹಿರಂಗವಾಗಿ ಹೇಳುತ್ತಾರೆ ಎಂದು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
ಕೇಂದ್ರದವರು ಜಾತಿವಾರು ಜನಗಣತಿ ಮಾಡಲು ಮುಂದಾಗುತ್ತಿದ್ದಾರೆ. ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವುದು ಜಾತಿ ಸಮೀಕ್ಷೆಯಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಹಿಂದುಳಿದ ವರ್ಗಗಳನ್ನು ಗುರುತಿಸುವುದಾಗಿದೆ. ಯಾರೂ ಹಿಂದುಳಿದಿದ್ದಾರೆ ಅವರನ್ನು ಪತ್ತೆಹಚ್ಚಿ ಕಾನೂನು ಜಾರಿಮಾಡಿ ಕಾರ್ಯಕ್ರಮ ರೂಪಿಸುವುದು ಸರ್ಕಾರದ ಆಶಯವಾಗಿದೆ ಎಂದು ಪೊನ್ನಣ್ಣ ಅವರು ಒತ್ತಿ ಹೇಳಿದರು.
ಸಂವಿಧಾನದ ಮೂಲಕವೇ ಸಮಾನತೆ ತರುವುದು ಸರ್ಕಾರದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಯಾರೂ ಹಿಂದುಳಿದಿದ್ದಾರೆ. ಅವರಿಗೆ ವಿಶೇಷ ಕಾರ್ಯಕ್ರಮಗಳನ್ನು ಜಾರಿಗೆ ತರುವುದು, ಮೀಸಲಾತಿ ನೀಡುವುದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಉದ್ದೇಶವಾಗಿದೆ ಎಂದು ಹೇಳಿದರು.
ಇಂದಿರಾ ಸಹಾನಿ ಪ್ರಕರಣದಲ್ಲೂ ಸಹ ಸುಪ್ರೀಂಕೋರ್ಟ್ ದತ್ತಾಂಶದ ಅಂಕಿ ಅಂಶಗಳನ್ನು ಸಂಗ್ರಹಿಸಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಮಾನತೆ ಕಲ್ಪಿಸುವುದು ಸಮೀಕ್ಷೆಯ ಉದ್ದೇಶವಾಗಿದೆ ಎಂದು ವಿವರಿಸಿದರು.
ಸರ್ಕಾರ ಪ್ರತೀ ಹತ್ತು ವರ್ಷಕ್ಕೊಮ್ಮೆ ಗಣತಿ ಕಾರ್ಯ ಪುನರ್ ನಡೆಸಬೇಕು ಎಂದು ಹೇಳಿದೆ. ಪುನರ್ ಪರಿಶೀಲನಾ ಕಾರ್ಯವು ಸಹ ಆಗಬೇಕಿದೆ. ಆ ನಿಟ್ಟಿನಲ್ಲಿ ಕಾಂತರಾಜು ವರದಿ, ಜಯಪ್ರಕಾಶ್ ಹೆಗಡ್ಡೆ ಆಯೋಗ, ಈಗ ಮಧುಸೂದನ್ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಸಂವಿಧಾನ ಗೌರವಿಸುವವರು ಸಮೀಕ್ಷೆಯನ್ನು ಸ್ವಾಗತಿಸಬೇಕು. ಅದನ್ನು ದಾರಿ ತಪ್ಪಿಸಬಾರದು ಎಂದರು.
ಶಾಶ್ವತವಾಗಿ ತುಳಿತಕ್ಕೆ ಒಳಗಾದ, ಯಾರು ಹಿಂದುಳಿದಿದ್ದಾರೆ ಅವರನ್ನು ಗುರುತಿಸುವ ಕೆಲಸ ನಡೆಯುತ್ತಿದ್ದು, ರಾಜಕೀಯ ಬಿಟ್ಟು ಎಲ್ಲರೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು. ನ್ಯಾಯಾಲಯವು ಸಹ ಸಮೀಕ್ಷೆಯನ್ನು ಮುಂದುವರಿಸಬಹುದಾಗಿದೆ ಎಂದು ಹೇಳಿದೆ. ಇದು ಜಾತಿ ಸಮೀಕ್ಷೆಯಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದ್ದು, ವೈಜ್ಞಾನಿಕವಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಪ್ರತಿಪಾದಿಸಿದರು.
ರಾಜ್ಯದಲ್ಲಿ 2 ಕೋಟಿಗೂ ಹೆಚ್ಚು ಮನೆಗಳ ಸಮೀಕ್ಷೆ ನಡೆಯುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ 70 ರಿಂದ 80 ಮನೆಗಳು, ನಗರ ಪ್ರದೇಶದಲ್ಲಿ 110 ರಿಂದ 120 ಮನೆಗಳ ಸಮೀಕ್ಷೆಗೆ ಒಬ್ಬ ಸಮೀಕ್ಷೆದಾರರನ್ನು ನಿಯೋಜಿಸಲಾಗಿದೆ. ಜೊತೆಗೆ ಜಿಯೋ ಟ್ಯಾಗ್‍ನ್ನು ಬಳಸಲಾಗಿದೆ. ಹಾಗೆಯೇ ಆನ್‍ಲೈನ್ ಮೂಲಕವು ಸ್ವತಃ ಅವರವರೇ ಸಮೀಕ್ಷೆಯಲ್ಲಿ ದಾಖಲು ಮಾಡಿಕೊಳ್ಳಬಹುದಾಗಿದೆ ಎಂದರು.