ಜಿಲ್ಲೆ

ಜ. 4ರಿಂದ ಪಿಪಿಸಿಯಲ್ಲಿ ರಾಷ್ಟ್ರಮಟ್ಟದ ಅಂತರ್ ವಿವಿ ಪುರುಷರ ವಾಲಿಬಾಲ್ ಪಂದ್ಯಾಟ

ಗೋಪಾಲಕೃಷ್ಣ ಪಾದೂರ್

ಉಡುಪಿ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಪೂರ್ಣಪ್ರಜ್ಞ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಆಶ್ರಯದಲ್ಲಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಕೂಟ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜನವರಿ 4ರಿಂದ 8ರವರೆಗೆ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಡಾ. ಕಿಶೋರ್ ತಿಳಿಸಿದರು.

ಭಾನುವಾರ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 4 ರಂದು ಬೆಳಗ್ಗೆ 7:30ಕ್ಕೆ ಅದಮಾರು ಮಠದ ಶ್ರೀ ವಿಶ್ವ ಪ್ರಿಯತೀರ್ಥ ಸ್ವಾಮೀಜಿ ಹಾಗೂ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ  ಭೂಮಿಪೂಜೆಯೊಂದಿಗೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಜ. 5 ರಂದು ಬೆಳಗ್ಗೆ 10:30ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥರು ಹಾಗೂ ಶ್ರೀ ಈಶಪ್ರಿಯತೀರ್ಥರ ಆಶೀರ್ವಚನ ನೀಡಲಿದ್ದಾರೆ.

ಈ ಸಂದರ್ಭದಲ್ಲಿ  ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಜಂಟಿ ಕಾರ್ಯದರ್ಶಿ ಡಾ. ಬಲ್ವಿತ್ ಸಿಂಗ್, ರಾಜ್ಯ ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಶಾಸಕ  ರಘುಪತಿ ಭಟ್, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ, ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ.ಕೆ., ಪೂರ್ಣಪ್ರಜ್ಞ ಆಡಳಿತ ಮಂಡಳಿಯ ಗೌರವ ಕೋಶಾಧಿಕಾರಿ ಸಿ.ಎ. ಪ್ರಶಾಂತ್ ಹೊಳ್ಳ, ಕಾಲೇಜಿನ ಪ್ರಾಂಶುಪಾಲ, ಡಾ. ರಾಘವೇಂದ್ರ ಎ, ಉಪಸ್ಥಿತರಿರುತ್ತಾರೆ. ಪೂರ್ಣಪ್ರಜ್ಞ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಜಿ.ಎಸ್. ಚಂದ್ರಶೇಖರ್  ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದರು.

ಜ.8ರಂದು ಸಾಯಂಕಾಲ 7 ಗಂಟೆಗೆ ಸಮಾರೋಪ ಸಮಾರಂಭದಲ್ಲಿ  ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥರು, ಶ್ರೀ ಈಶಪ್ರಿಯತೀರ್ಥರು,  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ಶೋಭಾ ಕರಂದ್ಲಾಜೆ, ರಾಜ್ಯದ ಕ್ರೀಡಾಸಚಿವ ನಾರಾಯಣ ಗೌಡ, ಮಾಜಿ ಕ್ರೀಡಾಸಚಿವ ಪ್ರಮೋದ್ ಮಧ್ವರಾಜ್, ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಬಲೇಶ್ವರ ರಾವ್ ಪಾಲ್ಗೊಳ್ಳಲಿದ್ದಾರೆ.

ಐದು ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ಸುಮಾರು ನಾಲ್ಕು ವಲಯಗಳಿಂದ ಹದಿನಾರು ತಂಡಗಳಿಂದ  ತಲಾ 12 ಕ್ರೀಡಾಪಟುಗಳು, 12 ಕ್ರೀಡಾ ತರಬೇತುದಾರರು, 24 ಮಂದಿ ವ್ಯವಸ್ಥಾಪಕರು ಹಾಗೂ 40 ಮಂದಿ ತೀರ್ಪುಗಾರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಪೂರ್ಣಪ್ರಜ್ಞಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಜಿ.ಎಸ್. ಚಂದ್ರಶೇಖರ್, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ, ಪಿಪಿಸಿ ಉಡುಪಿ ಪ್ರಾಂಶುಪಾಲ ಡಾ.ರಾಘವೇಂದ್ರ ಎ, ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಸುಕುಮಾರ್ ಉಪಸ್ಥಿತರಿದ್ದರು.