ಜಿಲ್ಲೆ

ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ - ಈರಣ್ಣ ಕಡಾಡಿ

ಬೆಳಗಾವಿ: ಯೋಗಾಭ್ಯಾಸದಿಂದ ಆರೋಗ್ಯ ಚೆನ್ನಾಗಿರುತ್ತದೆ. ಆದ್ದರಿಂದ ದೈನಂದಿನ ಜೀವನದಲ್ಲಿ ಯೋಗ ರೂಢಿಸಿಕೊಳ್ಳಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ‘ವಸುದೈವ ಕುಟುಂಬಕಂ ಹಾಗೂ ಪ್ರತಿ ಅಂಗಳದಲ್ಲಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಮಂಗಳವಾರ ಹಮ್ಮಿಕೊಂಡಿದ್ದ ಯೋಗ ನಡಿಗೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಯೋಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯದ ಮಾರ್ಗವಾಗಿ ಒಪ್ಪಿಕೊಳ್ಳಲಾಗಿದೆ. ದೈನಂದಿನ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಒತ್ತಡ ನಿವಾರಣೆ ಕೂಡ ಸಾಧ್ಯವಾಗಲಿದೆ ಎಂದು ಹೇಳಿದರು. ಯೋಗ ನಡಿಗೆಯು ಜಿಲ್ಲಾಧಿಕಾರಿ ಕಾರ್ಯಾಲಯ ಆವರಣದಿಂದ ಆರಂಭಗೊಂಡು ಚನ್ನಮ್ಮ ವೃತ್ತದ ಮೂಲಕ ಜಿಲ್ಲಾ ಪಂಚಾಯಿತಿ ಕಾರ್ಯಾಲಯ ತಲುಪಿ ಸಂಪನ್ನಗೊಂಡಿತು.

ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯೋಗದ ಮಹತ್ವ ಬಗ್ಗೆ ಅರಿವು ಮೂಡಿಸುವ ಸಂದೇಶ ಫಲಕ ಪ್ರದರ್ಶಿಸಿದರು. ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ.ಶ್ರೀಕಾಂತ್ ಸುಣಧೋಳಿ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.