ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೩-೨೪ನೇ ಸಾಲಿನ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಜಿಲ್ಲಾ ಮಟ್ಟದ ಸಭೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು. 
ಜಿಲ್ಲೆ

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಮುಂದಾಗಿ

ಚಿಕ್ಕಮಗಳೂರು: ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಸಮಗ್ರ ಅಭಿವೃದ್ಧಿಯ ಜೊತೆಗೆ ಸಾಮಾಜಿಕ, ಆರ್ಥಿಕ, ಸಾಂಸ್ಕÈತಿಕವಾಗಿಯೂ ಅಭಿವೃದ್ಧಿ ಮಾಡಲು ಎಲ್ಲ ಇಲಾಖೆಯ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೩-೨೪ನೇ ಸಾಲಿನ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಯೋಜನೆಯು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಗ್ರಾಪಂ ಅಧಿಕಾರಿಗಳು, ಅಧ್ಯಕ್ಷರು ಹಾಗೂ ಸದಸ್ಯರ ಜವಾಬ್ದಾರಿ ಹೆಚ್ಚಿದೆ ಎಂದರು.
ತಮ್ಮ ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ-ಪಂಗಡಗಳು ಹೆಚ್ಚು ವಾಸಿಸುವ ಗ್ರಾಮಗಳಿಗೆ ಆದ್ಯತೆ ನೀಡಿ ಗ್ರಾಮಗಳಲ್ಲಿರುವ ಪ್ರತಿ ಮನೆ ಮನೆಗಳನ್ನು ಭೇಟಿ ನೀಡಿ ಅವರ ಸ್ಥಿತಿ-ಗತಿ ಗಳನ್ನು ಅಧ್ಯಯನ ಮಾಡಿ ಮಾಹಿತಿ ಪಡೆಯಬೇಕು. ಜೊತೆಗೆ ಅರ್ಹರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ನೀಡಲು ಸಮಗ್ರ ಮಾಹಿತಿಯನ್ನು ಕ್ರೋಡಿಕರಿಸಬೇಕು ಎಂದು ಸೂಚನೆ ನೀಡಿದರು.
ಆಯ್ಕೆಯಾದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು, ನೈರ್ಮಲ್ಯ, ಶೌಚಗೃಹ, ಅಂಗನವಾಡಿ, ಶಾಲಾ ಕಟ್ಟಡ, ಒಳಚರಂಡಿ, ಶಾಲಾ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣ, ವಿದ್ಯಾರ್ಥಿ ವೇತನ, ವೃದ್ಯಾಪ್ಯ, ಅಂಗವಿಕಲರ ಮಾಸಾಶನ ಸೇರಿದಂತೆ ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಪೌಷ್ಟಿಕ ಆಹಾರ, ಅನಿಮೀಯ ಮತ್ತು ಅನಾರೋಗ್ಯ ಮುಕ್ತ ಗ್ರಾಮ, ಯುವಕರಿಗೆ ವೃತ್ತಿ ಕೌಶಲ್ಯ, ತರಬೇತಿ, ಸಾಮಾಜಿಕ ಭದ್ರತೆ, ಜೊತೆಗೆ ಕೇಂದ್ರ ಸರ್ಕಾರದ ಸೌಲಭ್ಯಗಳಾದ ಗ್ಯಾಸ್, ಆಹಾರ ಸುರಕ್ಷೆ, ಜನಧನ ಖಾತೆ ಸೇರಿದಂತೆ ಎಲ್ಲ ಯೋಜನೆಗಳು ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಲ್ಲಿರುವಂತೆ ಅಂದಾಜು ಪಟ್ಟಿ ತಯಾರಿಸಿ ಸಲ್ಲಿಸಬೇಕು ಎಂದು ಹೇಳಿದರು.
ಈ ಯೋಜನೆಯನ್ನು ಕ್ರಿಯಾಶೀಲವಾಗಿ ರೂಪಿಸಲು ಪಂಚಾಯಿತಿ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಿ ಆ ಮೂಲಕ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ಈಗಾಗಲೇ ಒಂದೊAದು ಗ್ರಾಮಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ತಲಾ ೨೦ ಲಕ್ಷ ರೂ.ಗಳ ಒಟ್ಟು ೪೦ ಲಕ್ಷ ರೂ.ಗಳ ಅಂದಾಜು ಪಟ್ಟಿಯನ್ನು ಸರ್ಕಾರದ ನಿಯಮನುಸಾರ ಸಿದ್ಧಪಡಿಸಿ ಸಲ್ಲಿಸುವಂತೆ ಜೊತೆಗೆ ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಇಲಾಖೆಗಳ ಕಾರ್ಯಕ್ರಮಗಳನ್ನು ಜೋಡಿಸಿಕೊಂಡು ಗ್ರಾಮಗಳ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಸಭೆಯಲ್ಲಿ ಜಿಪಂ ಸಿಇಒ ಡಾ.ಗೋಪಾಲಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.