ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ನನಗೆ ಗೊತ್ತಿಲ್ಲ, ಅವರು ಅವರ ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದರು.
ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪತ್ತೆಗೆ ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ. ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ ಎಂದು ಹೇಳಿದರು.
ಯಾವುದೇ ತಪ್ಪು ಮಾಡದ ಶಾಸಕ ಎಚ್.ಡಿ. ರೇವಣ್ಣ ಅವರ ಬಂಧನ ಖಂಡಿಸಿ ನಾವು ಪ್ರತಿಭಟನೆ ನಡೆಸಿದ್ದೇವೆಯೇ ಹೊರತು ಪ್ರಜ್ವಲ್ ರೇವಣ್ಣ ಪರವಾಗಿ ಪ್ರತಿಭಟನೆ ನಡೆಸಿಲ್ಲ. ಪೆನ್‌ಡ್ರೈವ್ ಪ್ರಕರಣದಲ್ಲಿ ಪೆನ್‌ಡ್ರೈವ್ ತಮಿಳುನಾಡು ಸೇರಿದಂತೆ ವಿವಿಧೆಡೆ ತಯಾರಿಸಿರುವ ಕುರಿತು ಮಾಹಿತಿ ಇದೆ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸಿ ಸತ್ಯಾಂಶ ಬಯಲಿಗೆ ತರಲಿ ಎಂದು ಆಗ್ರಹಿಸಿದರು.
ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕೆ.ಟಿ. ಶ್ರೀಕಂಠೇಗೌಡ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಈ ಬಾರಿ ವಿವೇಕಾನಂದ ಅವರಿಗೆ ಟಿಕೆಟ್ ನೀಡಲಾಗಿದೆ. ಶ್ರೀಕಂಠೇಗೌಡ ಜಾತ್ಯತೀತ ಜನತಾದಳ ಪಕ್ಷದ ಕಟ್ಟಾಳು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಪ್ಪಟ ಶಿಷ್ಯ. ಹಾಗಾಗಿ ಶ್ರೀಕಂಠೇಗೌಡರ ಮುಂದಾಳತ್ವದಲ್ಲಿಯೇ ಈ ಚುನಾವಣೆ ನಡೆಯಲಿದ್ದು, ಈ ಬಗ್ಗೆ ಯಾರು ಅನುಮಾನ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಇ.ಸಿ. ನಿಂಗರಾಜ್ ಗೌಡ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಗೊಂದಲ ಪರಿಹಾರವಾಗಿದ್ದು, ಬಿಜೆಪಿಯು ಈ ಕ್ಷೇತ್ರವನ್ನು ಇದೀಗ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಬಿಜೆಪಿಯವರು ಸಹ ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ಅವರ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದರು.