ಜಿಲ್ಲೆ

ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಬಿ.ಸಿ.ಶಿವಾನಂದಮೂರ್ತಿ ಹೇಳಿಕೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೇ ಮಾಹೆಯಲ್ಲಿ ಹಲವು ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇ ಮಾಹೆಯಲ್ಲಿ ಶಂಕರಾಚಾರ್ಯ, ಭಗೀರಥ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ, ಭಗವಾನ್ ಬುದ್ಧರ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸುವಂತೆ ಕಿವಿಮಾತು ಹೇಳಿದರು.

2ರಂದು ಶಂಕರಾಚಾರ್ಯರ ಜಯಂತಿ ಮತ್ತು 10ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಹಾಗೂ ಸಮುದಾಯದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಗುವುದು. 4ರಂದು ಭಗೀರಥ ಜಯಂತಿಯನ್ನು ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿಯಿಂದ ವಿವಿಧ ಕಲಾತಂಡಗಳೊಂದಿಗೆ ಜಿಪಂ ಕಚೇರಿವರೆಗೂ ಮೆರವಣಿಗೆ ನಡೆಸಲಾಗುವುದು. ನಂತರ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ನೀಡಲಾಗುವುದು. ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಭಗೀರಥ ಜಯಂತಿಯನ್ನು ಆಚರಿಸುವಂತೆ ಸೂಚನೆ ನೀಡಲಾಗುವುದು ಎಂದರು.

ರಾಜ್ಯಸರ್ಕಾರ ಪ್ರಥಮ ಬಾರಿಗೆ ಎಲ್ಲ ಜಿಲ್ಲೆಗಳಲ್ಲಿ ಭಗವಾನ್ ಬುದ್ಧರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಆದೇಶವನ್ನು ಹೊರಡಿಸಿದೆ. ಅದೇ ರೀತಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಉದ್ಯಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ, ಬೋಧಿವೃಕ್ಷಕ್ಕೆ ನೀರು ಹಾಕಲಾಗುವುದು. ಕಾರ್ಯಕ್ರಮದಲ್ಲಿ ಬೌದ್ಧ ಬಿಕ್ಕುಗಳಿಂದ ವಿಶೇಷ ಉಪನ್ಯಾಸ ನಡೆಯಲಿದೆ. ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಗುವುದು ಎಂದು ಹೇಳಿದರು.

ಬುದ್ಧಂ ಶರಣಂ ಗಚ್ಛಾಮಿ ಎಂಬ ಘೋಷ ವಾಕ್ಯ ಇರುವ ತೆರೆದ ರಥದ ಮೇಲೆ ಬುದ್ಧರ ಭಾವಚಿತ್ರವಿರಿಸಿ ಜಿಲ್ಲಾಧಿಕಾರಿ ಕಚೇರಿಯಿಂದ ಜಯಚಾಮರಾಜೇಂದ್ರ ಒಡೆಯರ್ ವೃತ್ತ, ನೂರಡಿ ರಸ್ತೆಯ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಮೆರವಣಿಗೆ ತಲುಪಲಿದೆ. ಸಾರ್ವಜನಿಕರು ಮುಕ್ತವಾಗಿ ಮೆರವಣಿಗೆಯಲ್ಲಿ ಭಾಗವಹಿಸಬಹುದು. ಈ ಕಾರ್ಯಕ್ರಮವನ್ನು ಸುವ್ಯವಸ್ಥಿತವಾಗಿ ಹಾಗೂ ಶಾಂತಿಯುತವಾಗಿ ನಡೆಸಲಾಗುವುದು ಎಂದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಪೌರಾಯುಕ್ತ ಪಂಪಶ್ರೀ, ಸಂಚಾರ ಠಾಣೆ ಆರಕ್ಷಕ ನಿರೀಕ್ಷಕ ಸಂತೋಷ್, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪಾ, ಮುಖಂಡರಾದ ವೆಂಕಟಗಿರಿಯಯ್ಯ, ಅಹಮದ್ ಪಾಷಾ, ಡಾ.ಶಿವರಾಜ್, ಡಾ.ವೆಂಕಟೇಶ್, ಸಿದ್ದಯ್ಯ, ನಾಗರಾಜು, ನಾಗರತ್ನಾ ಇತರರಿದ್ದರು.