ಜಿಲ್ಲೆ

ಮೈಸೂರಿನಲ್ಲಿ ಜೂ.27 ರಂದು ಕೆಂಪೇಗೌಡ ಜಯಂತಿ

ಸದೇಶ್ ಕಾರ್ಮಾಡ್

ಮೈಸೂರು: ನಾಡಪ್ರಭು ಕೆಂಪೇಗೌಡ ಅವರ 514ನೇ ಜಯಂತಿಯನ್ನು ಎಲ್ಲ ವರ್ಗದವರ ಜತೆಗೂಡಿ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಲಾ ಮಂದಿರದಲ್ಲಿ ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಮಾಡಲಾಗುವುದು. ಅಂದು ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಅವರದಿಂದ ಬೆಳಗ್ಗೆ 10ಕ್ಕೆ ಮೆರವಣಿಗೆ ಆರಂಭಗೊಂಡು ಕಲಾ ಮಂದಿರದವರೆಗೂ ಮೆರವಣಿಗೆ ಸಾಗಲಿದೆ. ಮಧ್ಯಾಹ್ನ 12ಕ್ಕೆ ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್ ಮಾತನಾಡಿ, ಕಾರ್ಯಕ್ರಮ ಆಯೋಜನೆಗೆ ಸರ್ಕಾರ 50 ಸಾವಿರ ರೂ. ಅನುದಾನ ನೀಡಿದ್ದು, ಸರ್ಕಾರದ ನಿಯಮಾವಳಿಗಳ ಅನ್ವಯ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಂಡಿಕೆರೆ ಗೋಪಾಲ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಕನ್ನಡಪರ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ, ಮೋಹನ್ ಕುಮಾರ್ ಗೌಡ ಹಾಗೂ ಇತರರು ಇದ್ದರು.