ಮೈಸೂರು: ಪ್ರಸಕ್ತ ಸಾಲಿನಲ್ಲಿ ಮಾರ್ಚ್ 1ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಮ್ಮಿಕೊಂಡಿದ್ದು, ಇದನ್ನು ಸುಸೂತ್ರವಾಗಿ ನಡೆಸಲು ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಸೂಚಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಅಧಿಕಾರಿಗಳು, ಪ್ರಾಂಶುಪಾಲರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆ ದಿನಗಳಂದು ನಿತ್ಯ ಬೆಳಗ್ಗೆ 10 ರಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ನಡೆಯಲಿವೆ. ಮೈಸೂರು ನಗರದಲ್ಲಿ 27 ಪರೀಕ್ಷಾ ಕೇಂದ್ರಗಳು ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಕೇಂದ್ರಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ದ್ವಿತೀಯ ಪಿಯುಸಿ ಪರೀಕ್ಷೆಗಳು ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಎಲ್ಲ ರೀತಿಯ ಅಂತಿಮ ಹಂತದ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದರು.
ಮೈಸೂರು ತಾಲೂಕಿನ 27, ನಂಜನಗೂಡು ತಾಲೂಕಿನ 5, ತಿ.ನರಸೀಪುರ ತಾಲೂಕಿನ 4, ಹುಣಸೂರು ತಾಲೂಕಿನ 4, ಕೆ.ಆರ್. ನಗರ ತಾಲೂಕಿನ 2, ಸಾಲಿಗ್ರಾಮ ತಾಲೂಕಿನ ಒಂದು, ಎಚ್. ಡಿ ಕೋಟೆ ತಾಲೂಕಿನ 3 ಹಾಗೂ ಪಿರಿಯಾಪಟ್ಟಣ ತಾಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಎಕ್ಸಾಂ ಬರೆಯಲಿರುವ 35,362 ವಿದ್ಯಾರ್ಥಿಗಳು
ಒಟ್ಟು 35,362 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. 32,684 ಮೊದಲ ಬಾರಿಗೆ ಪರೀಕ್ಷೆ ಬರೆದರೆ, 2678 ವಿದ್ಯಾರ್ಥಿಗಳು ಪುನರ್ವಾತಿ ಹಾಗೂ ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ. ಜಿಲ್ಲೆಯಲ್ಲಿ 10 ರೂಟ್‌ಗಳನ್ನು ಮಾಡಿ ಅವುಗಳಿಗೆ ರೂಟ್ ಆಫೀಸರ್‌ಗಳನ್ನು ನೇಮಿಸಲಾಗಿದೆ. ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗಿ ವಿತರಿಸಲು ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿಪಿಎಸ್ ಕೂಡಾ ಅಳವಡಿಸಲಾಗಿದೆ ಎಂದು ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಗೆ ನಿಯೋಜಿಸಿರುವ ಅಧಿಕಾರಿಗಳು ಶಿಕ್ಷಕರು ಹಾಗೂ ಸಿಬ್ಬಂದಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಕ್ರಮ ವಹಿಸಬೇಕು. ಪರೀಕ್ಷೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ಚೀಟಿಂಗ್, ಮಾಲ್ ಪ್ರಾಕ್ಟೀಸ್‌ಗೆ ಅವಕಾಶ ನೀಡಬಾರದು. ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ಬಳಕೆ ಮಾಡುವಂತಿಲ್ಲ. ಪರೀಕ್ಷೆ ಸಂಪೂರ್ಣ ವೆಬ್ಕಾಸ್ಟಿಂಗ್ ಆಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾತನಾಡಿ, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್, ಇನ್ಸ್‌ಪೆಕ್ಟರ್ ಹಾಗೂ ಡಿವೈಎಸ್ಪಿ ಮೊಬೈಲ್ ಸಂಖ್ಯೆಗಳನ್ನು ಪಡೆದು ಇಟ್ಟುಕೊಳ್ಳಿ. ರೂಟ್‌ಮ್ಯಾಪ್ ಪ್ರಕಾರ ಪೊಲೀಸ್ ಇಲಾಖೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು
ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಮಾತನಾಡಿ, ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುವ ಅಧಿಕಾರಿಗಳ ತಂಡ ನಿಗದಿತ ಸಮಯದಲ್ಲಿ ಜಿಲ್ಲಾ ಖಜಾನೆಯ ಬಳಿ ಇರಬೇಕು. ಪರೀಕ್ಷೆಯ ದಿನ ಸೆಸ್ಕ್ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಪರೀಕ್ಷೆಗೆ ನಿಯೋಜಿಸಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಸಮಯ ಪಾಲನೆ ಸರಿಯಾಗಿ ಮಾಡಬೇಕು. ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್‌ಕುಮಾರ್, ಡಿಸಿಪಿ ಮುತ್ತುರಾಜ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮರಿಸ್ವಾಮಿ, ಡಿಡಿಪಿಐ ಜವರೇಗೌಡ ಇತರರು ಇದ್ದರು.