ಜಿಲ್ಲೆ

ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿರಲಿ ವಿಜೃಂಭಣೆ

ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸಲಹೆ

ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಜಿಲ್ಲಾ ಮಟ್ಟದಲ್ಲಿ ನ.1ರಂದು ಅಜ್ಜರಕಾಡುನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿಜೃಂಭಣೆ ಹಾಗೂ ವೈಭವದಿಂದ ಆಚರಿಸಲು ಅಗತ್ಯ ಸಿದ್ಧತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಸೂಚಿಸಿದರು.

ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಮಂಗಳವಾರ (ಅ.14) ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಪಥಸಂಚಲನ, ಸನ್ಮಾನ

ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಪೊಲೀಸ್​, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್​ಎಸ್​ಎಸ್​, ಎನ್​ಸಿಸಿ ಸ್ಕೌಟ್ಸ್ ಮತ್ತು ಗೈಡ್ಸ್​, ಸೇವಾದಳ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದೆ. ಬಳಿಕ ಶಾಲಾ ವಿದ್ಯಾಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಸನ್ಮಾನವೂ ನಡೆಯಲಿದೆ ಎಂದರು.

ತಾಯಿ ಭುವನೇಶ್ವರಿಯ ಮೆರವಣಿಗೆ

ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 8 ಗಂಟೆಗೆ ಬೋರ್ಡ್​ ಹೈಸ್ಕೂಲ್​ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಕರ್ನಾಟಕದ ಇತಿಹಾಸ, ಪರಂಪರೆ, ಸಂಸತಿ ಮತ್ತು ಸಂಪ್ರದಾಯಗಳ ಕುರಿತು ಜಾಗೃತಿ ಮೂಡಿಸುವ ವಿವಿಧ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ. ಎಲ್ಲ ಅಧಿಕಾರಿಗಳು, ಸಿಬ್ಬಂದಿ, ಸಂಘ-ಸಂಸ್ಥೆಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್​ ವರಿಷ್ಠ ಹರಿರಾಂ ಶಂಕರ್​, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ, ನಗರಸಭಾ ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಉಪ ಸಮಿತಿ ರಚಿಸಲಾಗಿದ್ದು, ನೀಡಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಭಾಗವಹಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಬೇಕು. | ಸ್ವರೂಪಾ ಟಿ.ಕೆ. ಉಡುಪಿ ಜಿಲ್ಲಾಧಿಕಾರಿ.