ಜಿಲ್ಲೆ

ಅಕ್ಟೋಬರ್​ 4ರಂದು ಹಿರಿಯ ನಾಗರಿಕರ ದಿನಾಚರಣೆ

ಸೂಕ್ತ ಸಿದ್ಧತೆಗೆ ಶ್ಯಾಮಲಾ ಸಿ.ಕೆ. ಸೂಚನೆ

ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ

ವಿಜಯವಾಣಿ ಸುದ್ದಿಜಾಲ ಉಡುಪಿ

ನಗರದ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಅ.4ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಅಲ್ಲದೆ, ಹಿರಿಯರಿಗಾಗಿ ಕ್ರೀಡಾ ಚಟುವಟಿಕೆಗಳನ್ನೂ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಸೂಚಿಸಿದರು.

ಉಡುಪಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್​ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸೆಪ್ಟೆಂಬರ್​ 9ರಂದು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಅರಿವು ಕಾರ್ಯಕ್ರಮ

ಅಂದು ಬೆಳಗ್ಗೆ 9:30ರಿಂದ ಹಿರಿಯ ನಾಗರಿಕರಿಗಾಗಿ ಆರೋಗ್ಯ ತಪಾಸಣಾ ಶಿಬಿರ, ಅವರ ಕಾಳಜಿ ಹಾಗೂ ಆರೈಕೆ ಕುರಿತು ವಿಶೇಷ ಉಪನ್ಯಾಸ, ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳ ಮಾಹಿತಿ ಹಾಗೂ ಸೈಬರ್​ ಅಪರಾಧಗಳ ಕುರಿತಾಗಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಸೆ.16ರಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಜಿಲ್ಲಾ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಮಂಜುಳಾ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಬಿ., ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು.

ರಾಜ್ಯಮಟ್ಟದ ಸ್ಪರ್ಧೆಗೆ ಅವಕಾಶ

ಜಿಲ್ಲಾ ಮಟ್ಟದಲ್ಲಿ ನಡೆಯುವ ಕ್ರೀಡಾ ವಿಭಾಗದಲ್ಲಿ ಮ್ಯೂಸಿಕಲ್​ ಚೇರ್​, ಬಿರುಸಿನ ನಡಿಗೆ, ಬಕೆಟ್​ನಲ್ಲಿ ಬಾಲ್​ ಎಸೆಯುವ ಸ್ಪರ್ಧೆ ನಡೆಯಲಿದೆ. ಸಾಂಸ್ಕೃತಿಕ ವಿಭಾಗದಲ್ಲಿ ಗಾಯನ ಮತ್ತು ಏಕಪಾತ್ರಾಭಿನಯ ಸ್ಪರ್ಧೆ ನಡೆಯಲಿದೆ. 60ರಿಂದ -69 ವಯೋಮಾನದ ಮಹಿಳೆಯರಿಗಾಗಿ ಗಾಯನ ಸ್ಪರ್ಧೆಯಲ್ಲಿ ಹಾಗೂ ಪುರುಷರ ವಿಭಾಗದ ಬಿರುಸಿನ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಬಂದವರಿಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗುವವರಿಗೆ ಪ್ರಯಾಣ ದರ, ಊಟೋಪಚಾರ ವ್ಯವಸ್ಥೆ (ವಸತಿ ಹೊರತುಪಡಿಸಿ)ಯನ್ನು ಇಲಾಖಾ ವತಿಯಿಂದಲೇ ಕಲ್ಪಿಸಲಾಗುತ್ತಿದೆ.

ಹಿರಿಯ ನಾಗರಿಕರಿಗೆ ಯಾವುದೇ ಕುಂದು-ಕೊರತೆ ಉಂಟಾಗಬಾರದು. ಕುಡಿಯುವ ನೀರು, ಊಟೋಪಚಾರ ಸೇರಿದಂತೆ ಎಲ್ಲ ಅವಶ್ಯಕತೆಗಳ ಪಟ್ಟಿ ಮಾಡಿ ವಿವಿಧ ಇಲಾಖೆ ಹಾಗೂ ಸ್ವಯಂ ಸೇವಾ ಸಂಘಟನೆಗಳ ಸಹಯೋಗದೊಂದಿಗೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು. ಶಿಷ್ಟಾಚಾರದಂತೆ ಅಹ್ವಾನ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳು, ಗಣ್ಯರನ್ನು ಆಹ್ವಾನಿಸಬೇಕು. | ಶ್ಯಾಮಲಾ ಸಿ.ಕೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ