ಶ್ರೀರಂಗಪಟ್ಟಣ: ರಾಜ್ಯ ಸರ್ಕಾರದ ನಿರ್ದೇಶನದಂತೆ ಶ್ರೀರಂಗಪಟ್ಟಣ ಕ್ಷೇತ್ರದ ಗ್ರಾಮ ಪಂಚಾಯಿತಿವಾರು ಜನಸ್ಪಂದನಾ ಸಭೆ ಆಯೋಜಿಸುವ ಕುರಿತು ಅಧಿಕಾರಿಗಳು ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, 2023ರ ಪ್ರಸ್ತುತ ವರ್ಷವನ್ನು ರಾಜ್ಯ ಸರ್ಕಾರ ಬರ ಎಂದು ಅಧಿಕೃತ ಘೋಷಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ನೀಡಬಹುದಾದ ಸೌಲಭ್ಯ ಹಾಗೂ ಸೇವೆಗಳ ಬಗ್ಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕ್ರಮವಹಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಜನರು ಸೇರಿದಂತೆ ಜಾನುವಾರುಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು. ಅವಶ್ಯವಾಗಿ ಬೇಕಾಗಿರುವ ಸವಲತ್ತುಗಳ ಕುರಿತು ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಸಭೆ ನಡೆಸಿ ಪರಿಶೀಲಿಸಿ ಪಟ್ಟಿ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್ ಮಾತನಾಡಿ, ಪಿಡಿಒಗಳು ನಿಮ್ಮ ಪಂಚಾಯಿತಿ ವ್ಯಾಪ್ತಿಯ ಒಟ್ಟು ಹಳ್ಳಿಗಳು ಅಲ್ಲಿನ ಜನಸಂಖ್ಯೆ, ಪ್ರಸ್ತುತ ಎದುರಾಗಿರುವ ಸಮಸ್ಯೆ, ಆಗಬೇಕಿರುವ ಕೆಲಸಗಳ ಕುರಿತು ಮಾಹಿತಿಗಳ ಪಟ್ಟಿ ಮಾಡಿಟ್ಟುಕೊಳ್ಳಬೇಕು ಎಂದರು. ಸಭೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಪಂ ಇಒ ವೇಣು ಹಾಗೂ ಅಧಿಕಾರಿಗಳು ಹಾಜರಿದ್ದರು.